ವಿಜಯಸಾಕ್ಷಿ ಸುದ್ದಿ, ಧಾರವಾಡ: ಭಾರತದ ಸಂವಿಧಾನವನ್ನು ಪ್ರತಿಯೊಬ್ಬರೂ ಓದಬೇಕು. ಸಂವಿಧಾನ ಪೀಠಿಕೆಯಲ್ಲಿ ಹೇಳಿರುವ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ದೇಶದ ಅಭಿವೃದ್ಧಿಗೆ ವಿಶೇಷವಾಗಿ ಯುವ ಸಮೂಹ ತೊಡಗಿಸಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಹೇಳಿದರು.
ಅವರು ರವಿವಾರ ಬೆಳಿಗ್ಗೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಭಾರತವು ಎಲ್ಲ ಧರ್ಮದವರಿಗೂ ಸೇರಿದ್ದು, ಯಾವುದೇ ಪಕ್ಷ, ಧರ್ಮಗಳಿಗೆ ಮೀಸಲಾಗಿಲ್ಲ. ಡಾ. ಬಿ.ಆರ್. ಅಂಬೇಡ್ಕರ ಅವರು ರಚಿಸಿರುವ ಸಂವಿಧಾನವು ಪ್ರತಿಯೊಬ್ಬರ ಸಮಗ್ರ ಅಭಿವೃದ್ಧಿಗೆ ಮತ್ತು ಸಮಾಜದ ಹಿತಕ್ಕೆ ಪೂರಕವಾದ ಅಂಶಗಳನ್ನು ನೀಡಿದೆ. ಪ್ರತಿಯೊಬ್ಬರೂ ಪ್ರತಿದಿನ ಸಂವಿಧಾನ ಪೀಠಿಕೆಯನ್ನು ಓದುಬೇಕು. ಪಿಠೀಕೆಯಲ್ಲಿ ಇರುವ ಮೌಲ್ಯಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಗಣರಾಜ್ಯೋತ್ಸವ ಭಾರತದ ಒಂದು ರಾಷ್ಟ್ರೀಯ ಹಬ್ಬ. ದೇಶಕ್ಕೆ ಪ್ರಜಾಪ್ರಭುತ್ವದ ಆಡಳಿತ ಪದ್ಧತಿಯನ್ನು ಅಳವಡಿಸಿಕೊಂಡ ಸಂಭ್ರಮದ ದಿನವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ಪಿತಾಮಹ ಎನ್ನುತ್ತಾರೆ. ನಮ್ಮ ಸ್ವಾತಂತ್ರ‍್ಯ ಹೋರಾಟಗಾರರು, ನಮ್ಮ ನಾಯಕರು ಮತ್ತು ನಮ್ಮ ಸಂವಿಧಾನದ ರಚನೆಗೆ ಕೊಡುಗೆ ನೀಡಿದ ಪ್ರತಿಯೊಬ್ಬ ವ್ಯಕ್ತಿಯನ್ನು ನೆನಪಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳೋಣ ಎಂದು ಸಚಿವರು ತಿಳಿಸಿದರು.
ಒಂದು ದೇಶವಾಗಿ ನಾವು ಸಾಕಷ್ಟು ಆರ್ಥಿಕ ಸುಧಾರಣೆಗಳು ಮತ್ತು ಯಶಸ್ಸನ್ನು ಕಂಡಿದ್ದರೂ, ಬಡತನ ಮತ್ತು ನಿರುದ್ಯೋಗದಂತಹ ಸವಾಲುಗಳು ಈಗಲೂ ನಮ್ಮ ಮುಂದಿವೆ. ಈ ಸವಾಲುಗಳನ್ನು ಎದುರಿಸಿ ಹೊರಬರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಚಿವರು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ದಿವಗಂತ ರೋಹಿತ ಕುಂಬಾರ ಇವರ ಅಂಗಾಂಗ ದಾನ ಮಾಡಿದ ಕುಟುಂಬಕ್ಕೆ, ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿಶೇಷ ಸೇವೆ ಸಲ್ಲಿಸಿದ್ದಾಕ್ಕಾಗಿ ಶ್ರೀ ಸಿದ್ಧಾರೂಢ ಟ್ರಸ್ಟ್ಗೆ ಹಾಗೂ ಇಸ್ಕಾನ್ ಸಂಸ್ಥೆಗಳಿಗೆ ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಸನ್ಮಾನಿಸಿ, ಪ್ರಮಾಣಪತ್ರದೊಂದಿಗೆ ಗೌರವಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವೀರಣ್ಣ ಮತ್ತಿಗಟ್ಟಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಬರಮನಿ, ಉಪಪೊಲೀಸ್ ಆಯುಕ್ತರಾದ ರವೀಶ ಸಿ.ಆರ್ ಮತ್ತು ಮಾನಿಂಗ ನಂದಗಾವಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿ.ಪಂ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಮುಖ್ಯ ಯೋಜನಾ ನಿರ್ದೇಶಕ ದೀಪಕ ಮಡಿವಾಳರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ ದೇಸಾಯಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ, ಧಾರವಾಡ ತಹಸೀಲ್ದಾರ ಡಿ.ಎಚ್. ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಗರದ 150ಕ್ಕೂ ಹೆಚ್ಚು ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಶಾಲಾ ಶಿಕ್ಷಣ ಇಲಾಖೆಯ ವಿವಿಧ ಮಾಧ್ಯಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳು ಗಣರಾಜ್ಯೋತ್ಸವದ ನಿಮಿತ್ತ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಸಾಮೂಹಿಕ ನೃತ್ಯ, ದೇಶ ಭಕ್ತಿಗೀತೆ, ಗಾಯನ ಮತ್ತು ಛದ್ಮವೇಷದಾರಿಗಳಾಗಿ ವಿವಿಧ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.