ವಿಜಯಸಾಕ್ಷಿ ಸುದ್ದಿ, ಗದಗ: ಚಿಕ್ಕಮಕ್ಕಳಿಗೆ ಆರಂಭದಿಂದಲೇ ಉತ್ತಮ ಸೌಕರ್ಯಗಳೊಂದಿಗೆ ಶಿಕ್ಷಣ ದೊರೆಯಬೇಕು. ಈ ಉದ್ದೇಶದಿಂದ ನಗರದಲ್ಲಿ ಇಂದು ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ತಿಳಿಸಿದರು.
ನಗರದ ವಿವಿಧ ಪ್ರದೇಶಗಳಲ್ಲಿ ಸೋಮವಾರ ನಗರಸಭೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಸಚಿವರು ಮಾತನಾಡಿದರು.
ವಾರ್ಡ್ ನಂ. 21ರಲ್ಲಿ ಅಂದಾಜು 31.50 ಲಕ್ಷ ವೆಚ್ಚದಲ್ಲಿ ಅಂಗನವಾಡಿ ನಿರ್ಮಾಣ ಕಾಮಗಾರಿಗೆ ಸಚಿವರು ಚಾಲನೆ ನೀಡಿದರು. ವಾರ್ಡ್ ನಂ. 22ರಲ್ಲಿ 31.50 ಲಕ್ಷ ಅಂದಾಜು ವೆಚ್ಚದಲ್ಲಿ, ವಾರ್ಡ್ ನಂ. 1ರಲ್ಲಿ 36.50 ಲಕ್ಷ ವೆಚ್ಚದಲ್ಲಿ ಹಾಗೂ ವಾರ್ಡ್ ನಂ. 27ರಲ್ಲಿ 31.50 ಲಕ್ಷ ವೆಚ್ಚದಲ್ಲಿ ಅಂಗನವಾಡಿಗಳ ನಿರ್ಮಾಣ ಕಾಮಗಾರಿಗೆ ಸಚಿವ ಎಚ್.ಕೆ. ಪಾಟೀಲ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಸಚಿವ ಎಚ್.ಕೆ. ಪಾಟೀಲ ಅವರು ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಅಂಗನವಾಡಿ ಮಕ್ಕಳಗೆ ಕೇಕ್ ತಿನ್ನಿಸುವ ಮೂಲಕ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಪ್ರಭು ಬುರಬುರೆ, ನಗರಸಭೆ ಸದಸ್ಯರುಗಳಾದ ಚಿಮ್ಮಿ ನದಾಫ್, ರವಿ ಕಮತರ, ಲಕ್ಷ್ಮೀ ಸಿದ್ಧಮ್ಮನಹಳ್ಳಿ, ಲಲಿತಾ ಅಸೂಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ನಗರಸಭೆ ಪೌರಾಯುಕ್ತ ಮಹೇಶಪೋತದಾರ, ಇಂಜಿನಿಯರ್ ಹುಚ್ಚೇಶ್ವರ ಬಂಡಿವಡ್ಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ ಸೇರಿದಂತೆ ಇತರರು ಇದ್ದರು.
ಅಂಗನವಾಡಿ ಕಟ್ಟಡಗಳು ಸುಸಜ್ಜಿತವಾಗಿ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳಬೇಕು. ಕಳಪೆ ಕಾಮಗಾರಿಗೆ ಅವಕಾಶವಿಲ್ಲದಂತೆ ಸ್ಥಳೀಯ ಜನಪ್ರತಿನಿಧಿಗಳು ನಿಗಾ ವಹಿಸಬೇಕು. ಕಾಮಗಾರಿಗಳು ಶಿಸ್ತುಬದ್ಧವಾಗಿ ಗುಣಮಟ್ಟದಿಂದ ಕೂಡಿರುವಂತೆ ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕೆಂದು ಸಚಿವ ಎಚ್.ಕೆ. ಪಾಟೀಲ ಸೂಚಿಸಿದರು.