ವಿಜಯಸಾಕ್ಷಿ ಸುದ್ದಿ, ರೋಣ: ಮತಕ್ಷೇತ್ರದ ಜನರ ಇಚ್ಛೆಯಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಬರವಿಲ್ಲ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅವರು ಇಟಗಿ, ನೆಲ್ಲೂರ, ಪ್ಯಾಟಿ ಗ್ರಾಮಗಳಲ್ಲಿ ವಿವಿದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ನೆಲ್ಲೂರ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ 46 ಲಕ್ಷ ರೂ ಹಾಗೂ ಪ್ಯಾಟಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ 46 ಲಕ್ಷ ರೂ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಿದ್ದು, ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಖ್ಯವಾಗಿ ಶಾಸಕರ ಅನುದಾನದಲ್ಲಿ ಇಟಗಿ ಆದರ್ಶ ಶಾಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿ ಉದ್ಘಾಟಿಸಲಾಗಿದೆ. ಮತಕ್ಷೇತ್ರದ ಸಮಗ್ರ ಅಭಿವೃದ್ಧಿ ಬಯಸಿ ಸರಕಾರದಿಂದ ಅನುದಾನವನ್ನು ತರಲಾಗಿದ್ದು, ಕ್ಷೇತ್ರದ ಜನರ ಇಚ್ಛೆಯಂತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಗ್ಯಾರಂಟಿ ಯೋಜನೆಗಳಿಗೂ ತೊಂದರೆಯಿಲ್ಲ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿಯೂ ಹಿನ್ನಡೆಯಿಲ್ಲ ಎನ್ನುವುದನ್ನು ಕ್ಷೇತ್ರದ ಜನರು ಅರಿಯಬೇಕು ಎಂದರು.
ಗ್ರಾಮೀಣ ಭಾಗಗಳಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸಲು ಮುಂದಾಗಿದ್ದು, ಅಂಗನವಾಡಿ ಕೇಂದ್ರಗಳನ್ನು ಸಹ ನಿರ್ಮಿಸಲಾಗುತ್ತಿದೆ. ಗ್ರಾಮೀಣ ಭಾಗದ ಜನರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜೊತೆಗೆ ಗ್ರಾಮಸ್ಥರ ಇಚ್ಛೆಯಂತೆ ದೇವಸ್ಥಾನದ ಸಭಾಭವನಗಳ ನಿರ್ಮಾಣಕ್ಕೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು ಎಂದರು.
ಸಂಗನಗೌಡ ಪಾಟೀಲ, ವಿ.ಆರ್. ಗುಡಿಸಾಗರ, ಶರಣಗೌಡ ಪಾಟೀಲ, ಪ್ರಭು ಮೇಟಿ, ಮಂಜುಳಾ ಹುಲ್ಲಣ್ಣವರ, ಮೋಹನ್ ಹುಲ್ಲಣ್ಣವರ, ಇಸ್ಮಾಯಿಲ್ ಹೊರಪೇಟಿ ಸೇರಿದಂತೆ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.