ಕಾಲಮಿತಿಯಲ್ಲಿ ನಿಗದಿಪಡಿಸಿದ ಗುರಿ ಸಾಧಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಹಂಚಿಕೆ ಯೋಜನೆಯಡಿ ಅನುಷ್ಠಾನಿತ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿಯೇ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

Advertisement

ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಶನಿವಾರ ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಅರ್ಹ ಫಲಾನುಭವಿಗಳ ಆಯ್ಕೆ ಮಾಡುವಾಗ ಪಾರದರ್ಶಕತೆಯಿರಬೇಕು. ವಿಳಂಬ ಧೋರಣೆ ಮಾಡಬಾರದು. ಎಸ್‌ಸಿ-ಎಸ್‌ಟಿ ಕಾಲೋನಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟದ ಕಡೆಗೂ ನಿಗಾವಹಿಸಬೇಕು. ಆಯಾ ಆರ್ಥಿಕ ಸಾಲಿನಲ್ಲಿ ಅನುಷ್ಠಾನಿತ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವತ್ತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು. ತಾಲೂಕು ಮಟ್ಟದಲ್ಲಿಯೂ ಸಹ ಎಸ್‌ಸಿಪಿ / ಟಿಎಸ್‌ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದರು.

ಎಸ್‌ಸಿಪಿ ಟಿಎಸ್‌ಪಿ ಯೋಜನೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ, ದುರುಪಯೋಗ ಹಾಗೂ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಬಳಕೆ ಆಗದೇ ಇರುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳುವುದು ಅವರ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದಲ್ಲಿ ಕ್ರಿಮಿನಲ್ ಪ್ರಕರಣವೆಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಸಕಾಲ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾದಿಕಾರಿಗಳು, ಸಕಾಲ ಅನುಷ್ಠಾನದಲ್ಲಿ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಲು ಎಲ್ಲ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಿದರು.

ವಿನಾಕಾರಣ ಸ್ವೀಕರಿಸಿದ ಅರ್ಜಿಗಳನ್ನು ತಿರಸ್ಕರಿಸಬಾರದು. ಸ್ವೀಕರಿಸಿದ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಲೋಕೋಪಯೋಗಿ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಕಾಲದಲ್ಲಿ ಅರ್ಜಿಗಳ ವಿಲೇವಾರಿ ಸಮರ್ಪಕ ಕೆಲಸ ನಿರ್ವಹಣೆಯಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳಿಗೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿದ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಹೇಶ ಪೋತದಾರ ಮಾತನಾಡಿ, ಎಸ್.ಸಿ.ಎಸ್‌ಪಿ ಉಪಹಂಚಿಕೆ ಯೋಜನೆಯಡಿ ಜಿಲ್ಲೆಯಲ್ಲಿ ವಿವಿಧ ಇಲಾಖೆ ಸೇರಿದಂತೆ ಜನೆವರಿ 2025 ರವರೆಗೆ ಒಟ್ಟಾರೆ 83.01 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು, ಆ ಪೈಕಿ 71.72 ಕೋಟಿ ರೂ ಖರ್ಚಾಗಿದೆ. 40031 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದಾರೆ. ಅದೇ ರೀತಿ ಟಿ.ಎಸ್.ಪಿ. ಯೋಜನೆಯಡಿ ವಿವಿಧ ಇಲಾಖೆ ಸೇರಿದಂತೆ ಜನೆವರಿ 2025ರವರೆಗೆ 18.71 ಕೋಟಿ ರೂ ಬಿಡುಗಡೆಯಾಗಿದ್ದು, ಆ ಪೈಕಿ 15.68 ಕೋಟಿ ರೂ. ಖರ್ಚಾಗಿದೆ. 17326 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದಾರೆ ಎಂದು ಸಭೆಗೆ ತಿಳಿಸಿದರು.


Spread the love

LEAVE A REPLY

Please enter your comment!
Please enter your name here