ಉದ್ಯೋಗ ಮೇಳವನ್ನು ವ್ಯವಸ್ಥಿತವಾಗಿ ಜರುಗಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ್ 1 ಮತ್ತು 2ರಂದು ಹಮ್ಮಿಕೊಳ್ಳಲಾಗಿದ್ದು, ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟು ನಿರ್ವಹಣೆಗೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

Advertisement

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾರ್ಚ್ 1 ಮತ್ತು 2ರಂದು ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುವ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ನೋಂದಣಿ ಮಾಡಿಕೊಳ್ಳುತ್ತಿವೆ. ಸದರಿ ಕಂಪನಿಗಳಿಂದ 6695 ಹುದ್ದೆಗಳಿಗೆ ಬೇಡಿಕೆಯಿದ್ದು, ಉದ್ಯೋಗ ಆಕಾಂಕ್ಷಿಗಳು ವೆಬ್‌ಸೈಟ್ ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನೊಂದಾಯಿಸಿಕೊಳ್ಳಬೇಕು. ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು. ಈ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದರು.

ಯುವನಿಧಿ ಫಲಾನುಭವಿಗಳಾಗಿರುವ 4500 ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ನೋಂದಣಿ ಆಗಬೇಕು. ಪಾರ್ಕಿಂಗ್ ಪ್ರದೇಶ ಸೇರಿದಂತೆ ಉದ್ಯೋಗ ಮೇಳ ಜರುಗುವ ಸ್ಥಳದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶಿಸ್ತುಬದ್ಧ, ವ್ಯವಸ್ಥಿತ ಆಯೋಜನೆಯಾಗಬೇಕು ಎಂದು ನುಡಿದರು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸರಿಯಾಗಿ ಸಾರಿಗೆ ವ್ಯವಸ್ಥೆಯನ್ನು ಮಾಡಬೇಕು. ಬೆಟಗೇರಿಯಿಂದ ರೈಲ್ವೇ ನಿಲ್ದಾಣಯಿಂದ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಕೌಶಲ್ಯಾಭಿವೃದ್ಧಿ ಅಧಿಕಾರಿ ಬಸವರಾಜ ಮಲ್ಲೂರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಶರಣು ಗೋಗೇರಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.

ಉದ್ಯೋಗ ಮೇಳದ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅರಿತು ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಬೇಕು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗಾಗಿ ವಿವಿಧ ಮಳಿಗೆಗಳನ್ನು ತೆರೆಯಲಾಗುತ್ತಿದ್ದು, ಯಾವುದೇ ಗೊಂದಲ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರಿಗೆ ಊಟ-ಉಪಹಾರದ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಹಾಗೂ ತುರ್ತು ಚಿಕಿತ್ಸೆಗಾಗಿ ಆಂಬುಲನ್ಸ್, ಅಗ್ನಿಶಾಮಕ ವ್ಯವಸ್ಥೆ ಇರುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.


Spread the love

LEAVE A REPLY

Please enter your comment!
Please enter your name here