ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರದ ಕೊಳಗೇರಿ ಪ್ರದೇಶಗಳಲ್ಲಿ ಹಲವು ದಶಕಗಳಿಂದ ಯಾವುದೇ ಸೌಲಭ್ಯಗಳಿಲ್ಲದೇ ವಾಸ ಮಾಡುತ್ತಿದ್ದಾರೆ. ಸರ್ಕಾರಿ ಭೂಮಿಯಲ್ಲಿರುವ ಸ್ಲಂ ಪ್ರದೇಶದ ಕುಟುಂಬಗಳಿಗೆ ಸ್ಲಂ ಬೋರ್ಡ್ನಿಂದ ಈಗಾಗಲೇ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಇಂತಹ ಕುಟುಂಬಗಳಿಗೆ ರಾಜ್ಯ ಸರ್ಕಾರದ ಆದೇಶದಂತೆ ಇ-ಖಾಖಾ ವಿತರಿಸಲು ಸ್ಲಂ ಬೋರ್ಡ್ ಅಧಿಕಾರಿಗಳು ನಗರಸಭೆಗೆ ಮಾಹಿತಿಯನ್ನು ನೀಡಬೇಕೆಂದು ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಿದರು.
ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್.ಮಾನ್ವಿ ಮಾತನಾಡಿ, ಗದಗ-ಬೆಟಗೇರಿ ನಗರದಲ್ಲಿ ಅನೇಕ ಸ್ಲಂ ಪ್ರದೇಶದ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಆದರೆ ಈ ಕುಟುಂಬಗಳಿಗೆ ಭೂ ಮಾಲಿಕತ್ವ ನೀಡಲು ಅಧಿಕಾರಿಗಳಿಂದ ಸಾಧ್ಯವಾಗಿಲ್ಲ. ಈ ಹಿಂದೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ 94ಸಿಸಿ ಯೋಜನೆಡಿಯಲ್ಲಿ ನೂರಾರು ಕುಟುಂಬಗಳು ತಮ್ಮಗೆ ಭೂ ಮಾಲಿಕತ್ವ ನೀಡಬೇಕೆಂದು ಅರ್ಜಿಗಳನ್ನು ಸಲ್ಲಿಸಿದ್ದರೂ ಕಂದಾಯ ಇಲಾಖೆಯವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ.
ಸ್ಲಂ ಜನರ ಬೇಡಿಕೆಗಳಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಸ್ಪಂದಿಸದಿದ್ದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸ್ಲಂ ಸಮಿತಿ ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಮೆಹಬೂಬಸಾಬ ಬಳ್ಳಾರಿ, ಮೆಹರುನಿಸಾ ಡಂಬಳ, ಮಂಜುನಾಥ ಶ್ರೀಗಿರಿ, ದುರ್ಗಪ್ಪ ಮಣ್ಣವಡರ, ಖಾಜಾಸಾಬ ಇಸ್ಮಾಯಿಲನವರ, ಮೈಮುನ ಬೈರಕದಾರ, ಶಂಕ್ರಪ್ಪ ಪೂಜಾರ, ಜಂದಿಸಾಬ ಬಳ್ಳಾರಿ, ಸಲೀಂ ಹರಿಹರ, ಸಾಕ್ರುಬಾಯಿ ಗೋಸಾ ಮುಂತಾದವರಿದ್ದರು.