ಬೆಂಗಳೂರು:- ಇ-ಖಾತಾ ನಿರೀಕ್ಷೆಯಲ್ಲಿ ಇದ್ದವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕರ್ನಾಟಕ ಸರ್ಕಾರದ ಸಚಿವ ಸಂಪುಟವು ಗ್ರಾಮೀಣ ಪ್ರದೇಶಗಳಲ್ಲಿ ಇ-ಖಾತಾ ಯೋಜನೆಯನ್ನು ಜಾರಿಗೆ ತರಲು ಅನುಮೋದನೆ ನೀಡಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಧೇಯಕದ ಅಂಗೀಕಾರದೊಂದಿಗೆ, ಗ್ರಾಮೀಣ ಭಾಗದಲ್ಲಿ ಕಂದಾಯ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಗ್ರಾಮಠಾಣಾ ವ್ಯಾಪ್ತಿಯ ಮನೆ, ನಿವೇಶನಗಳ ಸಕ್ರಮೀಕರಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಎಲ್ಲಾ ಉಪ-ನೋಂದಣಿದಾರರಿಗೆ ಆಸ್ತಿ ನೋಂದಣಿಗೆ ಇ-ಆಸ್ತಿ ಮತ್ತು ಇ-ಖಾತಾ ಸಾಫ್ಟ್‌ವೇರ್ ಬಳಸುವಂತೆ ಆದೇಶಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ.
ಇ-ಸ್ವತ್ತು, ಇ-ಆಸ್ತಿ ಮತ್ತು ಇ-ವಿನ್ಯಾಸ ಸುಗಮವಾಗಿ ವಿತರಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಂಡಿತ್ತು. ಈಗಾಗಲೇ ಇ ಖಾತಾ ಕುರಿತು ಸೃಷ್ಟಿಯಾಗಿರುವ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಂದಾಗಿತ್ತು. ಇತ್ತೀಚೆಗೆ ವಿಕಾಸಸೌಧದಲ್ಲಿ ಮೂವರು ಸಚಿವರ ನೇತೃತ್ವದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿತ್ತು.