ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಭಾರೀ ಸಂಚಲನ ಮೂಡಿಸಿದೆ. ಅದರಲ್ಲೂ ಕಾಂಗ್ರೆಸ್ನಲ್ಲಿ ಹಲ್ ಚಲ್ ಎಬ್ಬಿಸಿದ್ದು, ಈ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಎನ್ ರಾಜಣ್ಣ ಪುತ್ರ, ಎಂಎಲ್ಸಿ ರಾಜೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಸಾಕ್ಷ್ಯ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಕಾನೂನು ಹೋರಾಟದ ಜತೆಗೆ ದೆಹಲಿ ಮಟ್ಟದಲ್ಲಿ ರಾಜಕೀಯದ ಆಟ ಆಡಲು ರಾಜಣ್ಣ ರೆಡಿಯಾಗಿದ್ದಾರೆ. ಇನ್ನು ಹನಿಟ್ರ್ಯಾಪ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.
ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎದುರು ಅರ್ಜಿದಾರರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಒಪ್ಪಿದೆ. ಹಾಗೆಯೇ ಈ ಪ್ರಕರಣದಲ್ಲಿ ನ್ಯಾಯಮೂರ್ತಿ ಹೆಸರೂ ಕೂಡ ಇರುವುದನ್ನು ಅರ್ಜಿದಾರರು ವಿಚಾರಣೆ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕದಲ್ಲಿ ನಡೆದ ಹನಿ-ಟ್ರ್ಯಾಪ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಸಿಲುಕಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠದೆದುರು ತರಲಾಗಿದೆ. ವಿಷಯವನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.