ನವದೆಹಲಿ:- ಮಂಡ್ಯ ಕೃಷಿ ವಿವಿ ಸ್ಥಾಪನೆ ಬಗ್ಗೆ ನನ್ನ ವಿರೋಧವಿಲ್ಲ. ಇದರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ HD ಕುಮಾರಸ್ವಾಮಿ, ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ. ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಕೃಷಿ ವಿವಿ ಸ್ಥಾಪನೆ ಬಗ್ಗೆ ನನ್ನ ಹೃದಯಪೂರ್ವಕ ಸ್ವಾಗತವಿದೆ. ಅಭಿವೃದ್ಧಿ ವಿಷಯದಲ್ಲಿ ನಾನೆಂದೂ ರಾಜಕೀಯ ಬೆರೆಸಿಲ್ಲ. ಇದು ನನ್ನ ವ್ಯಕ್ತಿತ್ವಕ್ಕೆ ಸಲ್ಲದ ನಡವಳಿಕೆ. ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದವನು ನಾನು. ಮಂಡ್ಯ ಜಿಲ್ಲೆ ಹಿತಕ್ಕೆ ಸಂಬಂಧಿಸಿ ಅಲ್ಲಿನ ಜನಪ್ರತಿನಿಧಿಯಾಗಿ ನನ್ನದೂ ಹೊಣೆಗಾರಿಕೆ ಇದೆ. ಈ ಬಗ್ಗೆ ನನ್ನಲ್ಲಿ ಗೊಂದಲ ಇಲ್ಲ. ಮುಖ್ಯಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನೀಡಿರುವ ಬಜೆಟ್ ಕೊಡುಗೆ ಬಗ್ಗೆ ನಾನು ಹೊಸದಾಗಿ ಹೇಳಬೇಕಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ, ರಕ್ತಸಂಬಂಧಕ್ಕೂ ಮೀರಿ ಅವಿನಾಭಾವ ಬಾಂಧವ್ಯದ ದ್ಯೋತಕವಾಗಿರುವ ಮಂಡ್ಯ ಜನರ- ನನ್ನ ನಡುವೆ ಹುಳಿ ಹಿಂಡುವ ವ್ಯರ್ಥ ಪ್ರಯತ್ನ ಬೇಡ ಎಂದು ಅವರು ಹೇಳಿಕೊಂಡಿದ್ದಾರೆ.