HomeGadag Newsಅಸಮತೋಲನ ನಿವಾರಣೆಗೆ ಸರ್ಕಾರದೊಂದಿಗೆ ಕೈಜೋಡಿಸಿ

ಅಸಮತೋಲನ ನಿವಾರಣೆಗೆ ಸರ್ಕಾರದೊಂದಿಗೆ ಕೈಜೋಡಿಸಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಾದೇಶಿಕ ಅಸಮತೋಲನವು ರಾಜ್ಯದ ಆರ್ಥಿಕ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಕ್ರಮ ಕೈಗೊಂಡು ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಸರ್ಕಾರದ ಜೊತೆಗೆ ಸಂಘ-ಸಂಸ್ಥೆಗಳು ಕೈ ಜೋಡಿಸಬೇಕು ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ವಿತ್ತೀಯ ಸುಧಾರಣೆ ಮತ್ತು ಯೋಜನಾ ಇಲಾಖೆಯ ಕಾರ್ಯದರ್ಶಿ ಡಾ. ವಿಶಾಲ್ ಆರ್ ತಿಳಿಸಿದರು.

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದಂತೆ ಡಾ. ಡಿ.ಎಂ. ನಂಜುಂಡಪ್ಪ ವರದಿಯ ಅನುಷ್ಠಾನದಿಂದ ತಾಲೂಕುಗಳು ಅಭಿವೃದ್ಧಿ ಹೊಂದಿರುವ ಬಗ್ಗೆ ಹಾಗೂ ಅಭಿವೃದ್ಧಿ ಹೊಂದದೇ ಇರುವ ತಾಲೂಕುಗಳನ್ನು ಗುರುತಿಸಿ ಹೊಸದಾಗಿ ಸೂಚ್ಯಂಕವನ್ನು ಕಂಡುಹಿಡಿದು ಪ್ರಾದೇಶಿಕ ಅಸಮತೋಲನವನ್ನು ನಿವಾರಣೆ ಮಾಡಲು ರಾಜ್ಯ ಸರ್ಕಾರವು ಆರ್ಥಿಕ ತಜ್ಞರಾದ ಪ್ರೊ. ಎಂ.ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯನ್ನು ರಚಿಸಿದೆ ಎಂದರು.

ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಜಿಲ್ಲೆಯಲ್ಲಿನ ಅತ್ಯಂತ ಹಳೆಯದಾದ, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳನ್ನು ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಾಣದ ಕೆಲಸವಾಗಬೇಕು. ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಸಭೆಗೆ ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಜಿಲ್ಲೆಯಲ್ಲಿ ಶಿಂಗಟಾಲೂರು ಏತ ನೀರಾವರಿ ಫೇಸ್-1 ಕೆಲಸ ಆಗಿದೆ. 2 ಮತ್ತು 3ನೇ ಹಂತದ ಕೆಲಸವಾಗಬೇಕು. ಗುಣಮಟ್ಟದ ಶಿಕ್ಷಣ ಒದಗಿಸಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯಲ್ಲಿ ಸಾವಯವ ಕೃಷಿ ಮಾರುಕಟ್ಟೆ ನಿರ್ಮಾಣ, ಸಗಣಿ ಗೊಬ್ಬರ ಬ್ಯಾಂಕ್ ನಿರ್ಮಾಣ, ನೈಸರ್ಗಿಕ ಕೀಟ ಹತೋಟಿ ವಿಧಾನ, ಗೃಹ ಕೈಗಾರಿಕೆ, ರಸ್ತೆಗಳ ಅಭಿವೃದ್ಧಿ, ಹನಿ ನೀರಾವರಿ ಯೋಜನೆ, ರೇಷ್ಮೆ ಸಾಕಾಣಿಕೆ ತರಬೇತಿ, ಗುಣಮಟ್ಟದ ಬಿತ್ತನೆ ಬೀಜದ ವಿತರಣೆ, ಮಣ್ಣಿನ ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ, ತ್ಯಾಜ್ಯ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಸಮಿತಿಯ ಸದಸ್ಯರಾದ ಎಸ್.ಟಿ. ಬಾಗಲಕೋಟಿ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಮಾಜಿ ಶಾಸಕ ಡಿ.ಆರ್. ಪಾಟೀಲ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ-ಸAಸ್ಥೆಗಳ ಮುಖ್ಯಸ್ಥರು, ಕೃಷಿಕರು, ಗಣ್ಯರು, ಸಂಘದ ಪದಾಧಿಕಾರಿಗಳು ಹಾಜರಿದ್ದರು.

ವಿ.ಪ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಬೇಕು. ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣ ಸೇರಿದಂತೆ ಗುಣಾತ್ಮಕ ಶಿಕ್ಷಣಕ್ಕೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಾಗುವಂತೆ ಕ್ರಮ ವಹಿಸಬೇಕು ಎಂದು ಸಭೆಯ ಗಮನಕ್ಕೆ ತಂದರು.

ತಾಲೂಕುಗಳ ಅಭಿವೃದ್ಧಿಗೆ ಅನುದಾನದ ಹಣ ಖರ್ಚಾದರೂ ಆರೋಗ್ಯ, ಮೂಲಭೂತ ಸೌಲಭ್ಯ, ಕೈಗಾರಿಕೆ, ಕೃಷಿ ಕ್ಷೇತ್ರಗಳಲ್ಲಿ ಕೆಲವು ತಾಲೂಕುಗಳು ಅಭಿವೃದ್ಧಿಯಲ್ಲಿ ಹಿಂದುಳಿದಿವೆ. ಇದಕ್ಕೆ ಸೂಕ್ತ ಕಾರಣಗಳನ್ನು ಪತ್ತೆ ಹಚ್ಚಿ ಅಸಮತೋಲನ ನಿವಾರಿಸಲು ಸೂಕ್ತ ಅಂಶಗಳನ್ನು ಸಮಿತಿಯು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ. ಸಮಿತಿಯು ಹೊಸದಾಗಿ ಸೂಚ್ಯಂಕ ನಿಗದಿಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಣೆ ಮಾಡುತ್ತಿದೆ.

– ಡಾ. ವಿಶಾಲ್ ಆರ್.

ವಿತ್ತೀಯ ಸುಧಾರಣೆ,

ಯೋಜನಾ ಇಲಾಖೆಯ ಕಾರ್ಯದರ್ಶಿ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!