ಹಾಸನ:- ಹಾಸನದ ಬಿ.ಎಂ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 21 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಜರುಗಿದೆ. 112 ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
21 ವರ್ಷದ ಶಶಾಂಕ್ ಮೃತ ಯುವಕ. ವೇಗವಾಗಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಬಿಎಂ ರಸ್ತೆಯಲ್ಲಿ ಪೊಲೀಸ್ ವಾಹನಕ್ಕೆ ಡಿಕ್ಕಿಯಾಗಿ ಆತ ತೀವ್ರವಾಗಿ ಗಾಯಗೊಂಡಿದ್ದ. ಕೂಡಲೇ ಅವನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಘಟನೆ ಪರಿಣಾಮ ಮೃತ ಯುವಕನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಮೃತ ಶಶಾಂಕ್ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ವರ್ಷದ Msc ಓದುತ್ತಿದ್ದ ಎಂದು ತಿಳಿದುಬಂದಿದೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



