ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಡಾ. ಕೆ.ಕಸ್ತೂರಿ ರಂಗನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರಾಗಿ,
ಕರ್ನಾಟಕ ಜ್ಞಾನ ಮಂಡಳಿ ಅಧ್ಯಕ್ಷರಾಗಿ, ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆಗೆ ಅನೇಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ. ರಾಜ್ಯಸಭಾ ಸದಸ್ಯರಾಗಿ, ಯೋಜನಾ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದು,
ಅವರ ಸಾಧನೆ ಗುರುತಿಸಿ ಭಾರತ ಸರ್ಕಾರ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಅವರ ಅಗಲಿಕೆಯಿಂದ ಭಾರತ ಒಬ್ಬ ಶ್ರೇಷ್ಠ ಬಾಹ್ಯಾಕಾಶ ವಿಜ್ಞಾನಿಯನ್ನು ಕಳೆದುಕೊಂಡು ಬಡವಾದಂತಾಗಿದೆ. ಭಗವಂತ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ನೀಡಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.