ಮಂಗಳೂರು:- ಇತ್ತೀಚಿನ ದಿನಗಳಲ್ಲಿ ದೇಶ, ರಾಜ್ಯದಲ್ಲಿ ಹಿಂದುಗಳ ಮೇಲಿನ ಹತ್ಯೆ, ಹಲ್ಲೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಅದರಂತೆ ಕರಾವಳಿಯಲ್ಲಿ ಗುರುವಾರ ಭೀಕರವಾಗಿ ರೌಡಿಶೀಟರ್ ಕೊಲೆ ಮಾಡಲಾಗಿದೆ.
ಎಸ್, ಗುರುವಾರ ರಾತ್ರಿ ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್ನ ಫಾಜಿಲ್ ಕೊಲೆ ಕೇಸ್ನ ಪ್ರಮುಖ ಆರೋಪಿಯಾಗಿದ್ದರು.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ನಡೆದಿತ್ತು. ಈ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಮತ್ತು ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ ಸುಹಾಸ್ ಶೆಟ್ಟಿಗೆ ಜೈಲಿನಿಂದ ಹೊರ ಬಂದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ.
ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಸುಹಾಸ್ ಶೆಟ್ಟಿಯನ್ನು ಸ್ಥಳೀಯರು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸುಹಾಸ್ ಶೆಟ್ಟಿ ಮೃತಪಟ್ಟಿದ್ದು ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಂಗಳೂರು ಹಲವೆಡೆ ನಾಕಾಬಂದಿ ಹಾಕಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಇಡೀ ಗಸ್ತು ತಿರುಗಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದು, ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾಕಂದ್ರೆ ಕೊಲೆಯಾದ ಸುಹಾಸ್ ಸ್ಥಳೀಯವಾಗಿ ಸಾಕಷ್ಟು ಕಾರ್ಯಕರ್ತರ ಪಡೆಯನ್ನು ಹೊಂದಿದ್ದ. ಹೀಗಾಗಿ ಪೊಲೀಸರು ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದಾರೆ.
ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ!
ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿರೋಧಪಕ್ಷದ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ ಅಶೋಕ್ ಹೇಳಿದ್ದೇನು?
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್. ಅಶೋಕ, ‘ಕಳೆದ 22 ತಿಂಗಳ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಮತಾಂಧ ಜಿಹಾದಿ ಬ್ರದರ್ಸ್‌ಗಳು ನಿರಂತರವಾಗಿ ಹಿಂದೂಗಳನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ಹಿಂದೂ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅತಿಯಾದ ಓಲೈಕೆಯ ಕಾರಣದಿಂದಲೇ ಮತಾಂಧ ಬ್ರದರ್ಸ್‌ಗಳು ಕಾನೂನು ಕೈಗೆತ್ತಿಕೊಂಡು ಹಿಂದೂಗಳನ್ನು ಹತ್ತಿಕ್ಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಪರೇಶ್ ಮೇಸ್ತಾ, ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ರುದ್ರೇಶ್ ಅವರಂತಹ ಹಿಂದೂ ಕಾರ್ಯಕರ್ತರ ಕೊಲೆ ನಡೆದಿತ್ತು. ಇವೆಲ್ಲ ಕಾಂಗ್ರೆಸ್ ಪಕ್ಷದ ಅತಿಯಾದ ತುಷ್ಟೀಕರಣದ ನೇರ ಪ್ರಭಾವದಿಂದ ಆಗಿರುವ ದಾರುಣ ಹತ್ಯೆಗಳು. ಈಗ ಸಹೋದರ ಸುಹಾಸ್ ಶೆಟ್ಟಿ ಕೊಲೆಗೂ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣವೇ ಕಾರಣ’ ಎಂದು ದೂರಿದ್ದಾರೆ.
ಬಿ ಎಸ್ ಯಡಿಯೂರಪ್ಪ ಹೇಳಿದ್ದೇನು?
ಸುಹಾಸ್ ಶೆಟ್ಟಿ ಅವರನ್ನು ಹತ್ಯೆಗೈದ ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ವಿಜಯೇಂದ್ರ ಹೇಳಿದ್ದೇನು?
ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಆಪೋಶನ ಮಾಡಿಕೊಂಡಿರುವ ಗೂಂಡಾಗಳು, ಸಮಾಜಘಾತುಕ ಶಕ್ತಿಗಳು ಕೊಲೆ, ಸುಲಿಗೆ, ಅತ್ಯಾಚಾರ ಹಾಗೂ ದೌರ್ಜನ್ಯಗಳಲ್ಲಿ ನಿರತವಾಗಿವೆ. ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಅವರ ಭೀಕರ ಕೊಲೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ಧಾರೆ.