ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಆರ್ ಸಿಬಿ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಎರಡು ರನ್ ಗಳಿಂದ ಗೆದ್ದು ಬೀಗಿದೆ.
ಪಂದ್ಯದಲ್ಲಿ RCB ಪರ ಆರಂಭಿಕವಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದ್ದು, ಹಲವು ದಾಖಲೆ ಉಡೀಸ್ ಆಗಿದೆ. ಆರ್ಸಿಬಿ ಪರ ವಿರಾಟ್ ಕೊಹ್ಲಿ 33 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 66 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಸಿಕ್ಸರ್ ಕಿಂಗ್: ಈ ಪಂದ್ಯದಲ್ಲಿ ಬಾರಿಸಿದ 5 ಸಿಕ್ಸ್ಗಳೊಂದಿಗೆ ವಿರಾಟ್ ಕೊಹ್ಲಿ ಆರ್ಸಿಬಿ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಆರ್ಸಿಬಿ ಪರ 300+ ಸಿಕ್ಸ್ ಬಾರಿಸಿದ ಏಕೈಕ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಆರ್ಸಿಬಿ ಪರ ಈವರೆಗೆ 304 ಸಿಕ್ಸ್ಗಳನ್ನು ಬಾರಿಸಿದ್ದಾರೆ.
ಸಿಕ್ಸರ್ ಸರದಾರ: ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 151 ಸಿಕ್ಸ್ ಬಾರಿಸಿ ಗೇಲ್ ಈ ದಾಖಲೆ ಬರೆದಿದ್ದರು. ಇದೀಗ ಬೆಂಗಳೂರಿನಲ್ಲಿ 154 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಈ ದಾಖಲೆ ಮುರಿದಿದ್ದಾರೆ.
500+ ರನ್ಸ್: ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 500+ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ.
ಅರ್ಧಶತಕದ ವೀರ: ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಡೇವಿಡ್ ವಾರ್ನರ್ (62) ಅವರ ದಾಖಲೆಯನ್ನು ಸಹ ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ಸಿಎಸ್ಕೆ ವಿರುದ್ಧದ ಅರ್ಧಶತಕದೊಂದಿಗೆ ಕೊಹ್ಲಿಯ ಐಪಿಎಲ್ ಹಾಫ್ ಸೆಂಚುರಿಗಳ ಸಂಖ್ಯೆ 62 ಕ್ಕೇರಿದೆ.
ರನ್ ಸರದಾರ: ಐಪಿಎಲ್ ಇತಿಹಾಸದಲ್ಲಿ ಒಂದು ತಂಡದ ಪರ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು. ವಾರ್ನರ್ ಪಂಜಾಬ್ ಕಿಂಗ್ಸ್ ವಿರುದ್ಧ 1134 ರನ್ ಬಾರಿಸಿ ಈ ದಾಖಲೆ ಬರೆದಿದ್ದರು. ಇದೀಗ ಸಿಎಸ್ಕೆ ವಿರುದ್ಧ 1146 ರನ್ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.