ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸರಬರಾಜು ಕುರಿತು ಜೂನ್ 20ರೊಳಗೆ ಥರ್ಡ್ ಪಾರ್ಟಿಯಿಂದ ವರದಿ ಪಡೆದು ಸಲ್ಲಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಕೆಡಿಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಏಜೆನ್ಸಿ ಒಪ್ಪಂದದ ಪ್ರಕಾರ ನೀಡಬೇಕಾಗಿದ್ದ ಎಂಎಲ್‌ಡಿ ನೀರು ನೀಡದೇ ಇದ್ದ ಕಾರಣ ಸಮೀಕ್ಷೆ ನಡೆಸಿ ಒಪ್ಪಂದದ ಪ್ರಕಾರ ನೀರು ಪೂರೈಕೆ ಮಾಡದಿದ್ದಲ್ಲಿ ಏಜೆನ್ಸಿಗೆ ದಂಡ ವಿಧಿಸಬೇಕು. ಬೇಸಿಗೆಯಲ್ಲಿ ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.
ನರಗುಂದ ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ನರಗುಂದ ಕ್ಷೇತ್ರದಲ್ಲಿರುವ ತಾಂಡಾಗಳಿಗೆ ವಸತಿ ಶಾಲೆ ಪ್ರಾರಂಭಿಸವಂತೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿತ್ತು ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಈಗಾಗಲೇ ಪ್ರಸ್ತಾವನೆಗಳನ್ನು ಸಲ್ಲಿಸಿದೆ ಎಂದು ತಿಳಿಸಿದರು.
ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ಪ್ರಸ್ತಾವನೆಗಳನ್ನು ಸಲ್ಲಿಸಿದ ಕೂಡಲೇ ಒಂದು ಪ್ರತಿಯನ್ನು ಸಂಬಂಧಪಟ್ಟ ಶಾಸಕರಿಗೆ ಕಳುಹಿಸಬೇಕು ಎಂದು ಅಧಿಕಾರಿಗೆ ನಿರ್ದೇಶಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಈ ಹಿಂದೆ ಪಿಯುಸಿಯಲ್ಲಿ ಜಿಲ್ಲೆಯು ಕೊನೆಯ ಸ್ಥಾನ ಪಡೆದುಕೊಂಡಿತ್ತು. ಈ ಬಾರಿ 25ನೇ ಸ್ಥಾನಕ್ಕೇರಿದ್ದು ಅಭಿನಂದನೀಯ. ಫಲಿತಾಂಶ ಬಂದ ಕೂಡಲೇ ಅದರ ಬಗ್ಗೆ ವಿಶ್ಲೇಷಣೆ ಮಾಡಿಕೊಳ್ಳಬೇಕು. ಸರ್ಕಾರಿ, ಅನುದಾನಿತ, ಅನುದಾನರಹಿತ ಇದರಲ್ಲಿ ಯಾವ ಕಾಲೇಜಿನ ಫಲಿತಾಂಶ ಉತ್ತಮವಾಗಿದೆ ಎನ್ನುವುದರ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ಎಲ್ಲಾ ಕಾಲೇಜು ಪ್ರಾಚಾರ್ಯರ ಸಭೆ ಕರೆದು ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಕಾಲೇಜುವಾರು ಗುರಿ ನಿಗದಿ ಮಾಡಿ, ಕಾರ್ಯಾಗಾರ ಮಾಡಬೇಕು ಎಂದು ಜಿ.ಪಂ ಸಿಇಓ ಅವರಿಗೆ ಸೂಚನೆ ನೀಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಮಾಜಿ ಶಾಸಕ ಡಿ.ಆರ್. ಪಾಟೀಲ, ಎಸ್.ಎನ್. ಬಳ್ಳಾರಿ, ಎಂ.ಡಿ. ಮಕಾಂದಾರ, ಪ್ರಭು ಮೇಟಿ, ಅಶೋಕ ಮಂದಾಲಿ, ಶಾರದ ಹಿರೇಗೌಡರ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ ಸೇರಿದಂತೆ ಗಣ್ಯರು, ಅಧಿಕಾರಿಗಳು ಹಾಜರಿದ್ದರು.
ರಾಜ್ಯ ಖನಿಜ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲ ಮಾತನಾಡಿ, ನರೇಗಾ ಕಾಮಗಾರಿಯಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳ ಮೂಲಭೂತ ಅಭಿವೃದ್ಧಿಗೆ ಪೂರಕವಾದ ಕಾಮಗಾರಿ ಸೇರಿದಂತೆ ರೈತರ ಹೊಲದ ಬದು ನಿರ್ಮಾಣ ಕಾಮಗಾರಿಗಳಿಗೆ ಅನುಮತಿ
ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಲಕ್ಷ್ಮೇಶ್ವರ ತಾಲೂಕಿಗೆ ತುಂಗಭದ್ರ ನದಿ ನೀರನ್ನು ಪೂರೈಸುವ ಪೈಪ್ ಪದೇ ಪದೇ ದುರಸ್ತಿಗೆ ಬರುತ್ತಿದ್ದು, ಅದಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಸಿದ ಅಧಿಕಾರಿಗಳು, ಸೂರಣಗಿಯಿಂದ ಲಕ್ಷ್ಮೇಶ್ವರವರೆಗಿನ ಪೈಪ್ ದುರಸ್ತಿ ಕಾರ್ಯಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ತಿಳಿಸಿದರು.