ನವದೆಹಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ಸಂಭವಿಸಿದ ಉಗ್ರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ‘ಆಪರೇಷನ್ ಸಿಂಧೂರ್ʼ ಹೆಸರಿನಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರರ ನೆಲೆಗಳನ್ನು ಹೊಡೆದುರುಳಿಸಿದೆ. ಸದ್ಯ ಭಾರತೀಯ ಸೈನಿಕರ ಸಾಹಸ ಪ್ರದರ್ಶನಕ್ಕೆ ದೇಶದೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನಾ ಪಡೆಗಳು ಪಾಕ್ ಮತ್ತು ಪಿಒಕೆ ಉಗ್ರರ ಅಡಗು ತಾಣಗಳ ಮೇಲೆ ನಡೆಸಿರುವ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಭಾರತೀಯ ಸಶಸ್ತ್ರ ಪಡೆಗಳು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರವಾದ ದಾಳಿ ನಡೆಸಿದ ಆಪರೇಷನ್ ಬಗ್ಗೆ ರಾಷ್ಟ್ರಪತಿಗೆ ವಿವರಿಸಿದ್ದಾರೆ. ಸರ್ಕಾರ ನಾಳೆ ಸರ್ವಪಕ್ಷ ಸಭೆಯನ್ನೂ ಕರೆದಿದೆ.
ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ‘ಆಪರೇಷನ್ ಸಿಂಧೂರ’ ಅನ್ನು ಪ್ರಾರಂಭಿಸಿದವು. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಭಾರತ ಸರ್ಕಾರ ಪ್ರತಿಜ್ಞೆ ಮಾಡಿತ್ತು.



