ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ನಿಂದ ದೊಡ್ಡ ಹಿನ್ನಡೆಯಾಗಿದ್ದು, 2022ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಆದೇಶದಿಂದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿದ್ದ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.
ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರಿನ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ಪಿಐಎಲ್ ವಿಚಾರಣೆಯ ಸಂದರ್ಭದಲ್ಲೇ ಕೋರ್ಟ್, ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು.
ಅಲ್ಲದೇ ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್ 321ಕ್ಕೆ ವಿರುದ್ಧವಾಗಿ ಸರಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.



