ವಿಜಯಸಾಕ್ಷಿ ಸುದ್ದಿ, ಗದಗ: 2025-26ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಐ.ಸಿ.ಎ.ಆರ್-ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರವು ಕರ್ನಾಟಕ ರಾಜ್ಯ ಕೃಷಿ ಇಲಾಖೆ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ದಿನಾಂಕ 29-05-2025 ರಿಂದ 12-06-2025 ರ ವರೆಗೆ ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಕೃಷಿ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದೆ.
ಈ ಹಿನ್ನೆಲೆಯಲ್ಲಿ ರೋಣ ತಾಲೂಕಿನ ಆರು ಗ್ರಾಮಗಳಾದ ಮುದೇನಗುಡಿ, ಹಿರೇಮಣ್ಣೂರು, ತಳ್ಳಿಹಾಳ, ಅಸೂಟಿ, ಕರಮುಡಿ ಹಾಗೂ ಮೇಲಮಠ ಗ್ರಾಮಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿತ್ತು. ಐ.ಸಿ.ಎ.ಆರ್-ಗೋಡಂಬಿ ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿಗಳು, ಕರ್ನಾಟಕ ಸರಕಾರದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಆತ್ಮಾ ಸಿಬ್ಬಂದಿ, ಕೃಷಿ ಸಖಿಯರು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳು, ಪಶು ಸಖಿಯರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ರೈತ ಮುಖಂಡರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಈ ಅಭಿಯಾನದಲ್ಲಿ ವಿವಿಧ ತಂತ್ರಜ್ಞಾನಗಳಾದ ಬೀಜೋಪಚಾರ, ಸುಧಾರಿತ ತಳಿಗಳು, ತೋಟಗಾರಿಕೆ ಬೆಳೆಗಳು, ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಕೃಷಿ ಯಂತ್ರೋಪಕರಣಗಳು, ಸಮಗ್ರ ಕೃಷಿ ಪದ್ಧತಿಗಳ ತರಬೇತಿ ನೀಡಲಾಯಿತು. ಮುಂಗಾರು ಬೆಳೆಗಳ ಬೇಸಾಯ ಕ್ರಮಗಳು, ಕೀಟ ಹಾಗೂ ರೋಗ ನಿರ್ವಹಣೆ ಬಗ್ಗೆ ಮಾಹಿತಿ ಕೈಪಿಡಿ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಯೋಜನೆಗಳ ಬಗ್ಗೆ ಹಸ್ತಪ್ರತಿಗಳನ್ನು ವಿತರಿಸಲಾಯಿತು.