ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆಗೆ ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ತಾಲೂಕು ಟಾಸ್ಕ್ಪೊರ್ಸ್ ಸಮಿತಿ ಸದಸ್ಯರು ಸಮನ್ವಯದಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತಹಸೀಲ್ದಾರ ಅಧ್ಯಕ್ಷತೆಯಲ್ಲಿ ತಾಲೂಕು ಟಾಸ್ಕ್ಫೋರ್ಸ್ ಸಮಿತಿಗಳ ಸಭೆಗಳು ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಜರುಗಬೇಕು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ನಿರ್ದೇಶಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ಹಾಗೂ ತಾಲೂಕು ಟಾಸ್ಕ್ಫೋರ್ಸ್ ಸಮಿತಿಗಳು ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣೆ ಹಾಗೂ ಪುನರ್ವಸತಿ ಕಾರ್ಯವನ್ನು ತೃಪ್ತಿಕರವಾಗಿ ಮಾಡದಿರುವುದು ಕಂಡು ಬಂದಿದೆ. ಬಾಲ ಕಾರ್ಮಿಕರು ಇರಬಹುದಾದ ಕೈಗಾರಿಕೆ, ಇಟ್ಟಂಗಿ ಭಟ್ಟಿ, ಹೊಟೇಲ್ ಹಾಗೂ ಇತರ ಸ್ಥಳಗಳಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಇತರ ಇಲಾಖೆಗಳ ಅನಿರೀಕ್ಷಿತ ಭೇಟಿ, ದಾಳಿಗಳ ಸಂಖ್ಯೆ ಹೆಚ್ಚಾಗಬೇಕು. ಬಾಲ ಮತ್ತು ಕಿಶೋರ ಕಾರ್ಮಿಕರನ್ನು ಕಳುಹಿಸುವ ಪಾಲಕರಿಗೆ ಮತ್ತು ದುಡಿಸಿಕೊಳ್ಳುವ ಮಾಲೀಕರಿಗೆ ತಕ್ಕ ಕಾನೂನು ಶಾಸ್ತಿ ಆಗಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ತಾಲೂಕು ಮಟ್ಟದಲ್ಲಿ ನಿಯಮಿತವಾಗಿ ಸಭೆಗಳು ಜರುಗಿಸುವುದು ಹಿರಿಯ ಕಾರ್ಮಿಕ ಅಧಿಕಾರಿಗಳ ಜವಾಬ್ದಾರಿ. ಸಭೆಗಳು ಆಗದೇ, ತಾಲೂಕಿನಲ್ಲಿ ಬಾಲ ಕಾರ್ಮಿಕರು ಪತ್ತೆ ಆದರೆ ಜಿಲ್ಲಾ ಮಟ್ಟದ ಕಾರ್ಮಿಕ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದರು.
ಮಕ್ಕಳು ಶಾಲೆಗಳಿಗೆ ಗೈರು ಉಳಿಯುತ್ತಿರುವುದು ಬಾಲಕಾರ್ಮಿಕರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ನಿರಂತರ ಶಾಲೆಗೆ ಗೈರಾಗಿರುವ ಮಕ್ಕಳ ಮಾಹಿತಿ ಪಡೆದುಕೊಂಡು ಗೈರು ಮಕ್ಕಳ ಮನೆಗಳಿಗೆ ಭೇಟಿ ಮಾಡಿ, ಸಮೀಕ್ಷಾ ವರದಿ ಸಲ್ಲಿಸಬೇಕು. ಪ್ರತಿ ಮಗು ಶಾಲೆಗೆ ಬರುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯಿಂದ ಶಾಲೆಗೆ ನಿರಂತರ ಗೈರಾದ ಮಕ್ಕಳ ಮನೆಗಳಿಗೆ ಭೇಟಿ ನೀಡಿ, ಪ್ರತಿ ತಿಂಗಳು 5ನೇ ದಿನಾಂಕದೊಳಗೆ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜೂ. 12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಬಾಲ ಕಾರ್ಮಿಕ ಮುಕ್ತ ಜಿಲ್ಲೆ ಮಾಡಲು ಕ್ರಿಯಾಯೋಜನೆ ರೂಪಿಸಿ, ಪರಿಣಾಮಕಾರಿಯಾಗಿ ಜಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಕಾರ್ಮಿಕ ಅಧಿಕಾರಿ ಅಕ್ಬರ ಮುಲ್ಲಾ ಅವರು ಸಭೆ ನಿರ್ವಹಿಸಿದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ, ಜಿಲ್ಲಾ ನಗರಾಭಿವೃದ್ಧಿ ಕೊಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಹೆಸ್ಕಾಂ ಇಇ ನರೇಂದ್ರ ಗದಗಕರ, ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತ ಸಚಿನ್ ಹಳೆಮನಿ, ಮಾರಿಕಾಂಬಾ ಹುಲಕೋಟಿ, ಹಿರಿಯ ಕಾರ್ಮಿಕ ನಿರೀಕ್ಷಕಾರಾದ ಅಕ್ರಮ ಅಲ್ಲಾಪುರ, ಭುವನೇಶ್ವರಿ ಕೋಟಿಮಠ, ರಜನಿ ಹಿರೇಮಠ, ಸಂಗೀತಾ ಬೆನಕೊಪ್ಪ, ಮೀನಾಕ್ಷಿ ಸಿಂದಿಹಟ್ಟಿ, ಲತಾ ಟಿ.ಎಸ್, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿ ಡಾ. ರೇಣುಕಾ ಅಮಲಜೇರಿ ಸೇರಿದಂತೆ ಇತರರು ಇದ್ದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ ಸ್ವಾಗತಿಸಿ, ವಂದಿಸಿದರು.
ಮಕ್ಕಳು ಶಾಲೆಗಳಿಗೆ ಗೈರು ಉಳಿಯುತ್ತಿರುವುದು ಬಾಲಕಾರ್ಮಿಕರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ನಿರಂತರ ಶಾಲೆಗೆ ಗೈರಾಗಿರುವ ಮಕ್ಕಳ ಮಾಹಿತಿ ಪಡೆದುಕೊಂಡು ಗೈರು ಮಕ್ಕಳ ಮನೆಗಳಿಗೆ ಭೇಟಿ ಮಾಡಿ, ಸಮೀಕ್ಷಾ ವರದಿ ಸಲ್ಲಿಸಬೇಕು. ಪ್ರತಿ ಮಗು ಶಾಲೆಗೆ ಬರುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯಿಂದ ಶಾಲೆಗೆ ನಿರಂತರ ಗೈರಾದ ಮಕ್ಕಳ ಮನೆಗಳಿಗೆ ಭೇಟಿ ನೀಡಿ, ಪ್ರತಿ ತಿಂಗಳು 5ನೇ ದಿನಾಂಕದೊಳಗೆ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.