ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ವ್ಯವಸ್ಥಿತವಾಗಿ ಜರುಗಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಜುಲೈ 5ರಿಂದ 12ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ಜರುಗಲಿದ್ದು, ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಕುರಿತು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷೆಗಳಲ್ಲಿ ಯಾವುದೇ ನಕಲು, ಅವ್ಯವಹಾರ, ಅಕ್ರಮ ನಡೆಯದಂತೆ ಕ್ರಮ ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸರಬರಾಜು ಸೇರಿದಂತೆ ಮೂಲಭೂತ ಸೌಲಭ್ಯ ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಪರೀಕ್ಷಾ ಸಮಯದಲ್ಲಿ ಯಾವುದೇ ಲೋಪದೋಷಗಳಾಗದಂತೆ ಸಂಬಂಧಿತ ಅಧಿಕಾರಿಗಳು ನಿಗಾ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ಪರೀಕ್ಷೆಗಳು ಜುಲೈ 5ರಿಂದ 12ರವರೆಗೆ ಜಿಲ್ಲೆಯ 12 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು. ಒಟ್ಟು 3528 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಜರುಗಿಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ಸಭೆಗೆ ವಿವರಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿ.ಎಲ್. ಬಾರಾಟಕ್ಕೆ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಜರಿದ್ದರು.

ಪರೀಕ್ಷಾ ಕೇಂದ್ರಗಳ ವಿವರ

ಗದುಗಿನ ವಿಡಿಎಸ್‌ಟಿ ಬಾಲಕಿಯರ ಸಂಯುಕ್ತ ಪ.ಪೂ ಕಾಲೇಜು, ಬಸವೇಶ್ವರ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ವಿಡಿಎಸ್‌ಟಿ ಬಾಲಕರ ಸಂಯುಕ್ತ ಪ.ಪೂ ಕಾಲೇಜು, ಮುಳಗುಂದದ ಎಸ್‌ಜೆಜೆಎಮ್ ಪ.ಪೂ ಕಾಲೇಜು, ಕಳಸಾಪೂರದ ಬ್ರೈಟ್ ಹಾರಿಝೋನ್ ಪ್ರೌಢಶಾಲೆ, ಮುಂಡರಗಿಯ ಜ.ಅ. ಪ್ರೌಢಶಾಲೆ, ಮುಂಡರಗಿಯ ವಿ.ಜಿ. ಲಿಂಬಿಕಾಯಿ ಪ್ರೌಢಶಾಲೆ, ನರಗುಂದದ ನವೋದಯ ಪ್ರೌಢಶಾಲೆ, ರೋಣದ ವಿ.ಎಫ್. ಪಾಟೀಲ ಎಸ್.ಎಸ್, ಗಜೇಂದ್ರಗಡದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಲಕ್ಷ್ಮೇಶ್ವರದ ಉಮಾವಿದ್ಯಾಲಯ ಮುನ್ಸಿಪಲ್ ಪ್ರೌಢಶಾಲೆ, ಶಿರಹಟ್ಟಿಯ ಎಫ್.ಎಮ್. ಡಬಾಲಿ ಸಂಯುಕ್ತ ಪ.ಪೂ ಕಾಲೇಜು.


Spread the love

LEAVE A REPLY

Please enter your comment!
Please enter your name here