ವಿಜಯಸಾಕ್ಷಿ ಸುದ್ದಿ, ಧಾರವಾಡ: ಡಕನ್ನಡಕ್ಕಾಗಿ ಹೋರಾಟ ನಡೆಸಿದವರ ಮೇಲೆ ಪೊಲೀಸ್ ಪ್ರಕರಣಗಳು ದಾಖಲಾಗಿರುವ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು. ಪೊಲೀಸ್ ಮತ್ತು ಜಿಲ್ಲಾಡಳಿತ ಈ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.
ಅವರು ಬುಧವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿದರು.
ಗೋಕಾಕ ಚಳುವಳಿಯ ಸ್ಮರಣೆಗಾಗಿ ಹುಬ್ಬಳ್ಳಿಯ ಗಬ್ಬೂರ ಬೈಪಾಸ್ ಹತ್ತಿರ ಇರುವ ಸರ್ಕಲ್ನಲ್ಲಿ ಡಾ. ರಾಜಕುಮಾರ ಅವರ ಸ್ಮಾರಕವನ್ನು ನಿರ್ಮಿಸಬೇಕು ಎಂಬುದು ಕನ್ನಡಪರ ಹೋರಾಟಗಾರರ ಬೇಡಿಕೆಯಾಗಿದೆ. ಈ ಕುರಿತು ಸರ್ಕಾರಕ್ಕೆ ನಿಯಮಾನುಸಾರ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತದೆ ಎಂದು ಹೇಳಿದರು.
ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಕನ್ನಡ ಉದ್ಯೋಗಿಗಳ ಸಂಖ್ಯೆ ಕಡಿಮೆ ಇರುವದರಿಂದ ಗ್ರಾಹಕರಿಗೆ ಭಾಷೆಯ ಸಮಸ್ಯೆ ಉಂಟಾಗುತ್ತಿದೆ. ಕೇಂದ್ರ ಸರ್ಕಾರ ಸ್ಥಳೀಯ ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಬ್ಯಾಂಕ್ ಉದ್ಯೋಗಿಗಳಿಗೆ ಸ್ಥಳೀಯ ಭಾಷೆ, ವಿಶೇಷವಾಗಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಿದೆ. ರಾಜ್ಯ ಸರ್ಕಾರ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಹಿನ್ನೆಲೆಯಲ್ಲಿ ಅನೇಕ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಎರಡು ಪ್ರಮುಖ ಕೇಂದ್ರಗಳಾಗಿರುವ ಧಾರವಾಡ ಮತ್ತು ಮೈಸೂರು ಭಾಗದಲ್ಲಿ ಕನ್ನಡ ಭಾಷೆಗೆ ಹಿನ್ನಡೆ, ಕುಸಿತವಾದರೆ, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ತೊಂದರೆ ಆಗುತ್ತದೆ ಎಂದು ಹೇಳಿದರು.
ಅಗತ್ಯವಿದ್ದಲ್ಲಿ ಧಾರವಾಡ ಜಿಲ್ಲೆಯಲ್ಲಿ ಕನ್ನಡ ಕಲಿಕಾ ಕೇಂದ್ರವನ್ನು ಪ್ರಾಧಿಕಾರದಿಂದ ತೆರೆಯಲಾಗುತ್ತದೆ. ಇದರ ಸಂಪೂರ್ಣ ವೆಚ್ಚವನ್ನು ಕನ್ನಡ ಪ್ರಾಧಿಕಾರದಿಂದಲೇ ಭರಿಸಲಾಗುವುದು ಎಂದು ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅನುಷ್ಠಾನಕ್ಕೆ ಅಗತ್ಯ ಕ್ರಮ ವಹಿಸಲಾಗಿದೆ. ಮಹಾನಗರ ಪಾಲಿಕೆಯಿಂದ ವಾಣಿಜ್ಯ ಮಳಿಗೆಗಳಿಗೆ ಪರವಾನಿಗೆ ಪತ್ರ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಲು ಮತ್ತು ತಮ್ಮ ಅಂಗಡಿಯ ನಾಮಫಲಕಗಳಲ್ಲಿ ಶೇ. 60ಕ್ಕಿಂತ ಹೆಚ್ಚು ಸ್ಥಳದಲ್ಲಿ ಕನ್ನಡ ಬಳಸಲು ಸೂಚಿಸಲಾಗುತ್ತದೆ. ಈ ಕುರಿತು ಪರಿಶೀಲಿಸಿ, ಸೂಕ್ತ ಕ್ರಮಕೈಗೊಳ್ಳಲು ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಮುಂದಿನ ತಿಂಗಳು ಈ ಕುರಿತು ಕನ್ನಡ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ನೋಂದಾಯಿಸುವ ವಿವಾಹಗಳಿಗೆ ನೀಡುವ ವಿವಾಹ ಪ್ರಮಾಣಪತ್ರವನ್ನು ಆಧಾರ್ ಕಾರ್ಡ್ನಲ್ಲಿ ಇರುವಂತೆ ಕನ್ನಡದೊಂದಿಗೆ ಇಂಗ್ಲೀಷ್ ಭಾಷೆಯನ್ನು ಬಳಸುವ ಕುರಿತು ಹೊರರಾಜ್ಯದವರಿಂದ ಮನವಿಗಳು ಸಲ್ಲಿಕೆಯಾಗಿದ್ದು, ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಸಭೆ ನಿರ್ವಹಿಸಿದರು. ವೇದಿಕೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ದ್ರಾಕ್ಷಾಯಿಣಿ ಹುಡೇದ, ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್, ಆಪ್ತ ಕಾರ್ಯದರ್ಶಿ ಮಣಿಕುಮಾರ, ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಇದ್ದರು.
ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ ಎಲ್ಲ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಇರಬೇಕು. ಆದರೆ ಅವಳಿ ನಗರದಲ್ಲಿ ನೋಡಿದಾಗ ಸರ್ಕಾರದ ಈ ನಿಯಮ ಸರಿಯಾಗಿ ಪಾಲನೆಯಾಗಿಲ್ಲ ಎಂಬುದು ಕಂಡುಬರುತ್ತಿದೆ. ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯು ಈ ಕುರಿತು ಕ್ರಮವಹಿಸಿ, ಎಲ್ಲ ಪ್ರಕಾರದ ಅಂಗಡಿ, ಮುಂಗಟ್ಟುಗಳ ಹಾಗೂ ಇತರ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಅಕ್ಷರಗಳು ಇರುವಂತೆ ನೋಡಿಕೊಳ್ಳಬೇಕು.
– ಡಾ. ಪುರುಷೋತ್ತಮ ಬಿಳಿಮಲೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು.



