ಬೆಂಗಳೂರು: ಆರ್ಸಿಬಿ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿ, ಡಿಎನ್ಎ ಹಾಗೂ ಕೆಎಸ್ಸಿಎ ವಿರುದ್ಧ ಕ್ರಿಮಿನಲ್ ಕೇಸ್ ಹಾಗೂ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧರಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್. ಕೆ. ಪಾಟೀಲ್, ಆರ್ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವ ಸಮಾರಂಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕಲ್ ಡಿ ಕುನ್ಹಾ ಅವರ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ.
ಕಾಲ್ತುಳಿತಕ್ಕೆ ಕಾರಣರಾದ ಖಾಸಗಿ ಸಂಸ್ಥೆ ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಖಾಸಗಿ ಸಂಸ್ಥೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ತೀರ್ಮಾನಿಸಿದ್ದರೆ, ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾವಾರು ವಿಚಾರಣೆ ನಡೆಸಲು ಒಳಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.



