ನವದೆಹಲಿ:- ಸಿಎಂಗೆ ಸುಳ್ಳು ಹೇಳೋದೇ ಕಾಯಕವಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಸುಳ್ಳು ಹೇಳುತ್ತಾ, ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಮುಂಗಾರು ಹಂಗಾಮಿಗಾಗಿ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆಯಿದೆ ಎಂದು ರಾಜ್ಯ ಸರ್ಕಾರ ಬೇಡಿಕೆ ಇಟ್ಟಿತ್ತು. ಆದರೆ, ಕೇಂದ್ರ ರಸಗೊಬ್ಬರ ಇಲಾಖೆ ರಾಜ್ಯದ ರೈತರ ಹಿತದೃಷ್ಟಿಯಿಂದ ಸಕಾಲಿಕವಾಗಿ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ 7.08 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾರಾಟ ದಾಖಲಾಗಿದೆ. ಕೇಂದ್ರ ಸರ್ಕಾರ ಸಕಾಲಕ್ಕೆ ಸಮರ್ಪಕವಾಗಿ ರಸಗೊಬ್ಬರ ಪೂರೈಸಿದ್ದರಿಂದಲೇ ಇಷ್ಟೊಂದು ಪ್ರಮಾಣದಲ್ಲಿ ರಸಗೊಬ್ಬರ ವಹಿವಾಟು ನಡೆದಿದೆ. ವಾಸ್ತವ ಹೀಗಿರುವಾಗ ಸಿಎಂ ಸಿದ್ದರಾಮಯ್ಯ ಅವರು ವಿನಾಕಾರಣ ಕೇಂದ್ರದ ಮೇಲೆ ವೃಥಾ ಆರೋಪ ಮಾಡುತ್ತಿರುವುದು ನಿಜಕ್ಕೂ ಶೋಚನೀಯ ಎಂದು ಖಂಡಿಸಿದ್ದಾರೆ.