ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಗಳು ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಮಳೆ ಪ್ರಮಾಣ ಹೆಚ್ಚಿದಂತೆ ಪ್ರವಾಹ, ರಸ್ತೆ ಅಪಘಾತ, ವಿದ್ಯುತ್ ದೋಷ, ಮನೆ ಕುಸಿತ ಮುಂತಾದ ಅಪಾಯಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಜೀವ, ಆಸ್ತಿಯ ರಕ್ಷಣೆಗೆ ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಅವರು ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜರುಗಿಸಿ, ಮುಂಗಾರು ಹಂಗಾಮಿನಲ್ಲಿ ಮಳೆ ಹಾನಿ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾತನಾಡಿದರು.
ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಳೆಯಿಂದಾಗಿ ಮಣ್ಣಿನ ಮನೆಗಳು ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸಂಬಂಧಿತ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಮಳೆಯಿಂದಾಗಿ ಜನ-ಜಾನುವಾರು, ಜೀವ ಹಾನಿ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆ, ಸೇತುವೆ ಹಾನಿಯಾಗಿದ್ದಲ್ಲಿ ಪರಿಶೀಲಿಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕ್ರಮ ವಹಿಸಬೇಕು ಎಂದು ತಿಳಿಸಿದರು.
ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿರುವ ಬೆಣ್ಣೆ ಹಳ್ಳ, ತುಪ್ಪರಿ ಹಳ್ಳ, ಬೇಡ್ತಿ ಹಳ್ಳ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು ತುಂಬಿ ಹರಿಯುವ ಸಾಧ್ಯತೆ ಇದೆ. ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ, ಜಲಮೂಲಗಳ ಸಮೀಪ ಸಂಚರಿಸದAತೆ, ನೀರಿಗೆ ಇಳಿಯದಂತೆ ತಿಳಿಸಬೇಕು. ತಹಸೀಲ್ದಾರರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಳ್ಳ, ಕೆರೆಗಳ ನೀರಿನ ಮಟ್ಟವನ್ನು ನಿರಂತರವಾಗಿ ಪರಿಶೀಲಿಸಬೇಕು. ಅಪಾಯಕಾರಿ ಮಟ್ಟ ತಲುಪಿದ ಸಂದರ್ಭದಲ್ಲಿ ತಕ್ಷಣ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ತಗ್ಗು ಪ್ರದೇಶಗಳು, ಹಳ್ಳ, ಕೆರೆಗಳ ತೀರ ಪ್ರದೇಶಗಳನ್ನು ಗುರುತಿಸಿ ಅಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವAತೆ ಕ್ರಮವಹಿಸಬೇಕು. ಜೀವ ಹಾನಿಗಳು ಸಂಭವಿಸಿದರೆ ಸಂಬAಧಪಟ್ಟ ಅಧಿಕಾರಿಗಳನ್ನು ನೇರ ಹೂಣೆಗಾರರನ್ನಾಗಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದರು.
ವೇದಿಕೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಇದ್ದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ತುರ್ತು ಸಹಾಯವಾಣಿ
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಇತರ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಜಿಲ್ಲೆಯ ಮಹಾನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ನಿರಾಶ್ರಿತರು, ಬಾಧಿತರು ಮತ್ತು ಸಾರ್ವಜನಿಕರು ತುರ್ತಾಗಿ ಸಂಪರ್ಕಿಸಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ ಎಲ್ಲ ತಹಸೀಲ್ದಾರರ ಕಾರ್ಯಾಲಯದಲ್ಲಿ ಮತ್ತು ಮಹಾನಗರ ಪಾಲಿಕೆಯಲ್ಲಿ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಿ, ದಿನದ 24 ಗಂಟೆ ಕರ್ತವ್ಯ ನಿರ್ವಹಿಸಲು ಸಿಬ್ಬಂದಿಗಳನ್ನು ನೇಮಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿ ಕ್ರಮ ಕೈಗೊಂಡಿದ್ದಾರೆ.