ಇದು ‘ಮಾಡು ಇಲ್ಲವೇ ಮಡಿ’ ಹೋರಾಟ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಉತ್ತರ ಕರ್ನಾಟಕ ಮಹಾಸಭೆಯ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗದಗ ಜಿಲ್ಲಾಡಳಿತ ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಬಗರ್ ಹುಕುಂ ಸಾಗುವಳಿದಾರರ ಅಹೋರಾತ್ರಿ ಧರಣಿ ಶನಿವಾರ 4ನೇ ದಿನಕ್ಕೆ ಮುಂದುವರೆದಿದೆ.

Advertisement

ಧರಣಿ ಸ್ಥಳದಲ್ಲಿ ಮಾತನಾಡಿದ ಉತ್ತರ ಕರ್ನಾಟಕ ಮಹಾಸಭಾದ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಬಂದು ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ಹಿಂತೆಗೆದುಕೊಳ್ಳುವುದಿಲ್ಲ. ರೈತರು ತಲೆತಲಾಂತರಗಳಿಂದ ಅರಣ್ಯ ಜಮೀನುಗಳನ್ನು ಸಾಗುವಳಿ ಮಾಡಿಕೊಂಡು ಬದುಕು ನಡೆಸುತ್ತಿದ್ದಾರೆ. ಆದರೆ ಸರ್ಕಾರ ಹಕ್ಕುಪತ್ರ ನೀಡದೇ, ರೈತರನ್ನು ಕಿರುಕುಳಕ್ಕೆ ಒಳಪಡಿಸುತ್ತಿದೆ. ಜೊತೆಗೆ ನಾಗಾವಿ ಗ್ರಾಮದಲ್ಲಿನ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಿರ್ಮಾಣಕ್ಕಾಗಿ ರೈತರ ಪೂರ್ವಜರ ಕಾಲದಿಂದ ಸಾಗುವಳಿ ಮಾಡುತ್ತಿದ್ದ ನೂರಾರು ಎಕರೆ ಕೃಷಿ ಭೂಮಿಯನ್ನು ಪರಿಹಾರ ನೀಡದೇ ಒಕ್ಕಲೆಬ್ಬಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಮಾತಿನಂತೆ ನಡೆದುಕೊಳ್ಳಬೇಕು. ಜಿಲ್ಲಾಡಳಿತ ತಕ್ಷಣವೇ ನಮ್ಮ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು. ಇಲ್ಲದಿದ್ದರೆ ದಿನದಿಂದ ದಿನಕ್ಕೆ ನಮ್ಮ ಹೋರಾಟದ ರೂಪುರೇಷೆ ಬದಲಾಗುತ್ತಾ ತೀವ್ರಗೊಳ್ಳುತ್ತದೆ ಎಂದು ಎಚ್ಚರಿಸಿದರು.

ಧರಣಿಯನ್ನು ಬೆಂಬಲಿಸಿ ಜಯಕರ್ನಾಟಕ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ಚವ್ಹಾಣ ಮಾತನಾಡುತ್ತಾ, ಧರಣಿ ನಿರತರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ಅವರು ತಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದು, ಅವರ ಬೇಡಿಕೆಗಳು ನ್ಯಾಯಸಮ್ಮತವಾದ್ದು, ಜಿಲ್ಲಾಡಳಿತ ರೈತರ ಹೋರಾಟವನ್ನು ಕಡೆಗಣಿಸಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಜೆಡಿಎಸ್ ಮುಖಂಡರಾದ ಗೋವಿಂದಗೌಡ್ರು, ಕೆಆರ್‌ಎಸ್ ಪಾರ್ಟಿಯ ಪದಾಧಿಕಾರಿಗಳು ಸೇರಿದಂತೆ ಅನೇಕ ಸಂಘಟನೆಯ ಮುಖಂಡರು ಹೋರಾಟವನ್ನು ಬೆಂಬಲಿಸಿದರು. ಈ ಸಂದರ್ಭದಲ್ಲಿ ಬಸವಣೇಪ್ಪ ಚಿಂಚಲಿ, ಎನ್.ಟಿ. ಪೂಜಾರ ಸೇರಿದಂತೆ ಜಿಲ್ಲೆಯ ಹಲವು ರೈತ ಸಂಘಟನೆಯ ಮುಖಂಡರು ಮತ್ತು ರೈತರು ಹಾಜರಿದ್ದರು.

“ಇದು ‘ಮಾಡು ಇಲ್ಲವೇ ಮಡಿ’ ಹೋರಾಟವಾಗಿದೆ. ಇಂದಿಗೆ ನಮ್ಮ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲೆಯ ಹಲವು ವಂಚಿತ ರೈತ ಕುಟುಂಬಗಳು ಮಳೆ, ಗಾಳಿ, ಚಳಿ ಲೆಕ್ಕಿಸದೆ ಹಗಲು-ರಾತ್ರಿ ಎನ್ನದೆ ಈ ಅಹೋರಾತ್ರಿ ಧರಣಿಯಲ್ಲಿ ಕುಳಿತಿದ್ದು, ಈ ಕೂಡಲೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಈ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ, ನೊಂದ ರೈತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು”

– ರವಿಕಾಂತ ಅಂಗಡಿ.

ಉತ್ತರ ಕರ್ನಾಟಕ ಮಹಾಸಭಾ ರಾಜ್ಯಾಧ್ಯಕ್ಷರು.


Spread the love

LEAVE A REPLY

Please enter your comment!
Please enter your name here