ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಬುಧವಾರ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶ್ರೀ ಮಹರ್ಷಿ ವಾಲ್ಮೀಕಿಯವರ ಸಾಧನೆಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸಿಕೊಡುವಂತೆ ಆಗಬೇಕು. ಹಾಗಾಗಿ ಸಮಾಜ ಇಲಾಖೆ ಸಹಯೋಗದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಕುರಿತ ಸಣ್ಣ ಕಥೆಗಳ ಬರವಣಿಗೆಯ ಸ್ಪರ್ಧೆ ಏರ್ಪಡಿಸಿ, ಆಯ್ದ ಕಥೆಗಳನ್ನು ಸಂಕಲನದಲ್ಲಿ ಪ್ರಕಟಿಸುವಂತೆ ಹೇಳಿದರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳು, ಸಾಹಿತಿಗಳು, ಪಿಎಚ್ಡಿ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ವಾಲ್ಮೀಕಿ ಅವರ ಕುರಿತು ಸುದೀರ್ಘವಾಗಿ ಅಧ್ಯಯನ ಮಾಡಿದ ಇಬ್ಬರು ಸಂಪನ್ಮೂಲ ವ್ಯಕ್ತಿಗಳ ಹೆಸರುಗಳನ್ನು ತಿಳಿಸಲು ಸಮುದಾಯದ ಮುಖಂಡರಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ನಂದಾ ಹನಬರಟ್ಟಿ ಮಾತನಾಡಿ, ಪ್ರತಿ ವರ್ಷದಂತೆ ಶ್ರೀ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ ಏಳಿಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಅಕ್ಟೋಬರ್ 7ರಂದು ಜರುಗುವ ರಾಜ್ಯ ಮಟ್ಟದ ಶ್ರೀ ವಾಲ್ಮೀಕಿ ಜಯಂತಿಯಂದು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲಾಗುತ್ತದೆ. ಈ ಪ್ರಶಸ್ತಿಗಾಗಿ ಸೆಪ್ಟಂಬರ್ 10ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಭೆಗೆ ತಿಳಿಸಿದರು.
ಸಮುದಾಯದ ಮುಖಂಡರು ಮಾತನಾಡಿ, ಭೀಷ್ಮ ಕೆರೆಯ ಹತ್ತಿರುವಿರುವ ವೃತ್ತಕ್ಕೆ ಮಹರ್ಷಿ ವಾಲ್ಮೀಕಿ ಅವರ ಹೆಸರನ್ನು ನೇಮಕ ಮಾಡಲಾಗಿದ್ದು, ಅದನ್ನು ಅಭಿವೃದ್ಧಿಪಡಿಸಬೇಕು. ಜಯಂತಿ ದಿನದಂದು ಮೆರವಣಿಗೆಗೆ ಕಲಾವಿದರ ತಂಡವನ್ನು ಒದಗಿಸಿಕೊಡಬೇಕು. ಜಿಲ್ಲೆಯಲ್ಲಿ ಶ್ರೀ ವಾಲ್ಮೀಕಿ ಭವನಗಳ ಕಾಮಗಾರಿಗಳು ಚುರುಕುಗೊಳ್ಳಬೇಕು ಎಂದು ಸಭೆಗೆ ತಿಳಿಸಿದರು.
ಇದನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಶ್ರೀ ಮಹರ್ಷಿ ವಾಲ್ಮೀಕಿ ವೃತ್ತಕ್ಕೆ ಸಂಬಂಧಿಸಿದಂತೆ ಇನ್ನುಳಿದ ಸಮಸ್ಯೆಗಳನ್ನು ಚರ್ಚಿಸಲು ಮತ್ತೊಂದು ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ ಕೆ.ಆರ್, ಡಿವೈಎಸ್ಪಿ ಮುರ್ತುಜಾ ಖಾದ್ರಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎಸಿ ಗಂಗಪ್ಪ, ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಶ್ರೀ ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಪರಿಶಿಷ್ಟ ವರ್ಗ, ಪರಿಶಿಷ್ಟ ಜಾತಿ ಗಣ್ಯರು, ಸಂಘ-ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡು ಶ್ರೀ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಸಲಹೆ-ಸೂಚನೆಗಳನ್ನು ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರ ನಿಗದಿ ಮಾಡಿದ ದಿನದಂದು ಜಿಲ್ಲಾಡಳಿತ ಭವನದಲ್ಲಿ ಸಾಂಕೇತಿಕವಾಗಿ ಆಚರಿಸಲಾಗುವುದು. ಮುಂದೆ ಸಮುದಾಯದವರು ತೀರ್ಮಾನಿಸಿದಂತೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


