ವಿಜಯಸಾಕ್ಷಿ ಸುದ್ದಿ, ಗದಗ: ಶಾಲಾ ಶಿಕ್ಷಕರ ನೇಮಕಾತಿಗಾಗಿ ಕಾನೂನು ಇಲಾಖೆಯ ಅಭಿಪ್ರಾಯ ಕೋರಲಾಗಿದೆ. ಅಲ್ಲಿನ ಅಭಿಪ್ರಾಯ ವ್ಯಕ್ತವಾದ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವ ಕಾರಣದಿಂದ ಹೊಸ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ಮಹಿಳಾ ಅಭ್ಯರ್ಥಿಗಳ ನೇಮಕಾತಿಗಾಗಿ ಪತಿ ಅಥವಾ ತಂದೆಯ ಆದಾಯ ಪ್ರಮಾಣಪತ್ರವನ್ನು ಸಲ್ಲಿಸಬೇಕೇ ಎಂಬ ವಿಷಯದ ಬಗ್ಗೆ ಇನ್ನು ನಿರ್ಧಾರವಾಗಿಲ್ಲ.
ಈ ಹಿನ್ನೆಲೆಯಲ್ಲಿ ಕಾನೂನು ಇಲಾಖೆಯಿಂದ ಅಭಿಪ್ರಾಯ ಪಡೆಯಲು ಕೋರಲಾಗಿದೆ. ಕಾನೂನು ಇಲಾಖೆಯ ಅಭಿಪ್ರಾಯ ಬಂದ ನಂತರವೇ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಜೊತೆಗೆ, ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವ ಪ್ರಕರಣದಲ್ಲಿ ಕೋರ್ಟ್ ನೀಡುವ ಸೂಚನೆಯಂತೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
“ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ರಾಜ್ಯ ಸರ್ಕಾರ ಒಪ್ಪುವುದಿಲ್ಲ. ಬದಲಾಗಿ, ಪ್ರತ್ಯೇಕ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲಾಗುತ್ತಿದೆ. ಈ ನೀತಿಯ ಅಡಿಯಲ್ಲಿ ದ್ವಿಭಾಷಾ ಅಥವಾ ತ್ರಿಭಾಷಾ ಸೂತ್ರದ ಬಗ್ಗೆ ಸಮಗ್ರ ಚರ್ಚೆ ನಡೆಸಲಾಗುವುದು” ಎಂದರು.
ಈ ಸಂದರ್ಭದಲ್ಲಿ ಶಾಸಕ ಜಿ.ಎಸ್. ಪಾಟೀಲ, ಪಕ್ಷದ ಪ್ರಮುಖರಾದ ಬಿ.ಬಿ. ಸೂಟಿ, ಅಕ್ಬರಸಾಬ್ ಬಬರ್ಚಿ, ಅಶೋಕ ಮಂದಾಲಿ, ಎಸ್ಪಿ ರೋಹನ್ ಜಗದೀಶ ಮುಂತಾದವರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಚರ್ಚೆಗೆ ಒಳಗಾಗಿರುವ ದ್ವಿಭಾಷಾ ಅಥವಾ ತ್ರಿಭಾಷಾ ಸೂತ್ರದ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಅಂತಿಮ ನಿರ್ಣಯಕ್ಕೆ ಬರಲಾಗುವುದು. ಸಾರ್ವಜನಿಕರ ಅಭಿಪ್ರಾಯ, ಶಾಸಕರ ಸಲಹೆ ಹಾಗೂ ರಾಜ್ಯ ಶಿಕ್ಷಣ ನೀತಿ ಸಮಿತಿಯ ಶಿಫಾರಸುಗಳನ್ನು ಪರಿಗಣಿಸಿ ಮುಂದಿನ ವರ್ಷದ ವೇಳೆಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.