ಹಾಸನ:- ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ.
ಈ ದುರಂತಕ್ಕೆ ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಹೇಳಿದ್ದಾರೆ. ಇನ್ನು ಮೃತರ ಪೈಕಿ ಬಹುತೇಕರು ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ತಮ್ಮ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 17ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರ ವಿವರ;
ಬಳ್ಳಾರಿ ನಿವಾಸಿ ಅಂತಿಮ ಬಿಇ ವಿದ್ಯಾರ್ಥಿ ಪ್ರವೀಣ್, ಹೊಳೆನರಸೀಪುರ ತಾಲೂಕಿನ ಹಳೆಕೋಟೆ ಹೋಬಳಿ ಕೆ.ಬಿ.ಪಾಳ್ಯ ನಿವಾಸಿ ರಾಜೇಶ್(17), ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ(17), ಮುತ್ತಿಗೆಹೀರಳ್ಳಿ ಗ್ರಾಮದ ನಿವಾಸಿ ಗೋಕುಲ್(17), ಕಬ್ಬಿನಹಳ್ಳಿ ನಿವಾಸಿಗಳಾದ ಕುಮಾರ(25), ಪ್ರವೀಣ(25), ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಗವಿ ಗಂಗಾಪುರ ಗ್ರಾಮ ನಿವಾಸಿ ಮಿಥುನ್(23), ಚಿಕ್ಕಮಗಳೂರು ಜಿಲ್ಲೆಯ ಮಾಣೇನಹಳ್ಳಿ ನಿವಾಸಿ ಬಿಇ ವಿದ್ಯಾರ್ಥಿ ಸುರೇಶ್(19), ಹಾಸನ ತಾಲೂಕಿನ ಬಂಟರಹಳ್ಳಿ ಗ್ರಾಮದ ನಿವಾಸಿ ಪ್ರಭಾಕರ್(55) ಮೃತ ದುರ್ದೈವಿಗಳು.
ದುರಂತದ ಬಗ್ಗೆ ದಕ್ಷಿಣ ವಲಯ IGP ಬೋರಲಿಂಗಯ್ಯ ಹೇಳಿಕೆ ನೀಡಿದ್ದು, ಘಟನೆಯಲ್ಲಿ ಇಲ್ಲಿಯವರೆಗೆ 9 ಜನರು ಮೃತಪಟ್ಟಿದ್ದಾರೆ. ಈ ಪೈಕಿ 6 ಜನ ಸ್ಥಳೀಯರು ಮತ್ತು ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗದ ಮೂವರು ವಿದ್ಯಾರ್ಥಿಗಳು. 17 ಜನರಿಗೆ ಗಾಯವಾಗಿದೆ, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಗೊಂಡವರ ಕುರಿತು ಮಾಹಿತಿ ಪಡೆಯುತ್ತಿದ್ದೇವೆ ಎಂದಿದ್ದಾರೆ.
ಹಾಸನ ದುರಂತಕ್ಕೆ ಸಿಎಂ ಸಂತಾಪ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
“ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ.
ಈ ಘೋರ ದುರ್ಘಟನೆಯ ಬಗ್ಗೆ ಕೇಳಿ ತುಂಬಾ ದುಃಖವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ. ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.