ವಿಜಯಸಾಕ್ಷಿ ಸುದ್ದಿ, ಗದಗ: ವಿಶ್ವದಲ್ಲಿ ಹಲವಾರು ದೇಶಗಳು ಪ್ರಜಾಪ್ರಭುತ್ವಕ್ಕೆ ತಮ್ಮ ತಮ್ಮ ವಿಚಾರಗಳನ್ನು ಅಳವಡಿಸಿಕೊಂಡಿವೆ. ಆದರೆ, ಭಾರತ ದೇಶವು ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ ಎಂದು ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.
ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ, ಪ್ರಜೆಗಳ ಹಿತಕ್ಕಾಗಿ ಪ್ರಜಾಪ್ರಭುತ್ವದ ಅವಶ್ಯಕತೆ ಇದೆ ಎನ್ನುವ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರದಿಂದಲೇ ದೇಶವು ಅಖಂಡ ಭಾರತವಾಗಿ ಉಳಿಯಲು ಸಾಧ್ಯವಾಯಿತು. ಡಾ. ಬಿ.ಆರ್. ಅಂಬೇಡ್ಕರ್‌ರ ಚಿಂತನೆಗಳು ಪೂರ್ಣ ಪ್ರಮಾಣದಲ್ಲಿ ಸಾಧಿಸಬೇಕಾಗಿದೆ. ವಿಶೇಷವಾಗಿ ಆರ್ಥಿಕ ಮತ್ತು ಸಾಮಾಜಿಕ ಸಮಾನತೆ ತರಬೇಕಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿಲ್ಲದ ದೇಶಗಳೂ ಸಹಿತ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಪ್ಪಿಕೊಳ್ಳುವ ಮಹತ್ವದ ಹೆಜ್ಜೆ ಇಡಬೇಕು. ಪ್ರಜಾಪ್ರಭುತ್ವದಲ್ಲಿ ಶಾಂತಿ ಮತ್ತು ಸಮಾನತೆಯ ಅವಕಾಶ ಕಲ್ಪಿಸಲಾಗಿದೆ ಎಂದರು.
ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಪ್ರಜೆಗಳ ಅಧೀನದಲ್ಲಿನ ಸರ್ಕಾರವೇ ಪ್ರಜಾಪ್ರಭುತ್ವವಾಗಿದೆ. ಪ್ರತಿಯೊಬ್ಬರೂ ಸ್ವಾತಂತ್ರ್ಯವಾಗಿ ಇರುವುದು ಸಂವಿಧಾನದಿಂದ ಸಾಧ್ಯವಾಗಿದೆ. ಸಂವಿಧಾನದ ಬೆಲೆ ಶಿಕ್ಷಣ ಪಡೆದಾಗ ಮಾತ್ರ ಸಾಧ್ಯವಾಗುತ್ತದೆ. ಸಂವಿಧಾನದಲ್ಲಿ ಮೀಸಲಾತಿ ಇರದೇ ಹೋಗಿದ್ದರೆ ಕೆಳವರ್ಗದ ಪ್ರಜೆಗಳು ಸಮಾಜ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಪ್ರಜಾಪ್ರಭುತ್ವದ ಕುರಿತು ಇನ್ನೂ ಹೆಚ್ಚು ಅರಿವು ಮೂಡಿಸುವ ಕಾರ್ಯವು ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು. ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಚಿತ್ರಕಲೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆಗೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ಎಸ್.ಎನ್. ಬಳ್ಳಾರಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು, ಸಿಬ್ಬಂದಿಗಳು ಹಾಜರಿದ್ದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಪ್ರಸ್ತುತಪಡಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸ್ವಾಗತಿಸಿದರು. ವೀರಯ್ಯ ಹೊಸಮಠ ಕಾರ್ಯಕ್ರಮ ನಿರೂಪಿಸಿದರು. ಎಚ್.ಆರ್. ಸಕ್ರಿ ವಂದಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನವನ್ನು ರಚಿಸದೇ ಇದ್ದರೆ ಕೆಳಹಂತದಲ್ಲಿರುವ ಪ್ರಜೆಗಳು ಅಧಿಕಾರ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಭಾರತವು ಬಲಿಷ್ಠ ಹಾಗೂ ಶ್ರೇಷ್ಠವಾದ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಎಲ್ಲ ಸೌಲಭ್ಯಗಳು ದೊರಕಬೇಕಾಗಿದೆ ಎಂದರು.
“ವಿಶ್ವದ 195 ದೇಶಗಳಲ್ಲಿ ಭಾರತ ದೇಶವು ಪ್ರಜಾಪ್ರಭುತ್ವದಲ್ಲಿ ತನ್ನದೇ ಆದ ವೈಶಿಷ್ಟ್ಯತೆ ಹಾಗೂ ಮಹತ್ವ ಹೊಂದಿದೆ. ವಿವಿಧತೆಯಲ್ಲಿ ಏಕತೆಯನ್ನು ಹಾಗೂ ಏಕತೆಯಲ್ಲಿ ವಿಭಿನ್ನತೆಯನ್ನು ಸಾರಿದ ದೇಶ ನಮ್ಮದು. ಸಂವಿಧಾನದ ಮೂರು ಅಂಗಗಳು ಒಂದಕ್ಕೊಂದು ಪೂರಕವಾಗಿವೆ. 18 ವರ್ಷ ಪೂರೈಸಿದ ಪ್ರತಿ ಸ್ತ್ರೀ-ಪುರುಷರೂ ಮುಕ್ತವಾಗಿ ತಮ್ಮ ಮತದಾನ ಮಾಡಬಹುದಾಗಿದೆ. ಬಂದೂಕಿನ ಅಸ್ತ್ರಕ್ಕಿಂತ ಮತದಾನವು ಬಲಿಷ್ಠವಾಗಿದೆ. ನಿರಂತರ ಜಾಗರೂಕತೆಯೇ ಪ್ರಜಾಪ್ರಭುತ್ವದ ಬೆಲೆಯಾಗಿದೆ”
– ಎಚ್.ಎ. ಕರ್ನೂಲ,
ಸರ್ಕಾರಿ ಪ.ಪೂ ಕಾಲೇಜು ಉಪನ್ಯಾಸಕ