ವಹಿಸಿದ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 20ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಶಿಷ್ಟಾಚಾರದನ್ವಯ ನೋಡಲ್ ಅಧಿಕಾರಿಗಳನ್ನು ನಿಯಮಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಿದ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

Advertisement

ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೆಲಿಪ್ಯಾಡ್ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದ ಹತ್ತಿರ ನುರಿತ ವೈದ್ಯರ/ಸಿಬ್ಬಂದಿ ತಂಡವನ್ನು ನಿಯೋಜಿಸುವುದು, ಸುಸಜ್ಜಿತ ಆಂಬುಲೆನ್ಸ್ ವ್ಯವಸ್ಥೆಗೆ ಕ್ರಮ ವಹಿಸುವುದು. ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವಾಗ ಜಿಲ್ಲೆಯಲ್ಲಿನ ರಸ್ತೆಗಳ ದುರಸ್ತಿಗೆ ಕ್ರಮ ವಹಿಸಬೇಕು. ವೇದಿಕೆ ಕಾರ್ಯಕ್ರಮದ ಸ್ಥಳವಾದ ಕನಕ ಭವನದ ಸುತ್ತಮುತ್ತಲಿನ ಆವರಣದ ಸ್ವಚ್ಛತೆಗೆ ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಬೇಕು. ಮುಖ್ಯಮಂತ್ರಿಗಳ ಪ್ರವಾಸ ಕಾಲದಲ್ಲಿ ಸಾರಿಗೆ ಸಂಚಾರದಲ್ಲಿ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳ ಪ್ರವಾಸ ಮುಗಿಯುವವರೆಗೂ ಎಲ್ಲ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ತಮ್ಮ ತಮ್ಮ ಕರ್ತವ್ಯ ನಿರ್ವಹಿಸಬೇಕು. ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮದಲ್ಲಿ ಇಲಾಖೆಯಿಂದ ಸೂಕ್ತ ಬಂದೋಬಸ್ತ್‌ಗೆ ಕ್ರಮ ವಹಿಸಲಾಗುವುದು ಎಂದರು.
ಸಭೆಯಲ್ಲಿ ಅಗ್ನಿಶಾಮಕ ವಾಹನ, ವಿದ್ಯುತ್ ಪೂರೈಕೆ, ಊಟದ ವ್ಯವಸ್ಥೆ, ವಾಹನಗಳ ಪೂರೈಕೆ, ವೇದಿಕೆ ಸುರಕ್ಷತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ್ ಸಜ್ಜನರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಸಂಖ್ಯಾ ಸಂಗ್ರಹಣಾಧಿಕಾರಿ ಕಂಬಾಳಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಮುಖ್ಯಮಂತ್ರಿಗಳು ಸೆ. 20ರಂದು ಬೆಳಿಗ್ಗೆ 11.25ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಹೆಲಿಪ್ಯಾಡ್‌ಗೆ ಆಗಮಿಸುವರು. ನಂತರ ಅಲ್ಲಿಂದ ಗದಗ ತಾಲೂಕು ಕುರುಬರ ಸಂಘದ ವತಿಯಿಂದ ಆಯೋಜಿಸಿರುವ ತಾಲೂಕು ಸಂಘದ ರಜತ ಮಹೋತ್ಸವ ಸವಿನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ, ರಾಜ್ಯಮಟ್ಟದ ಕನಕೋತ್ಸವ ಹಾಗೂ ಸಂಘಜೀವಿ ಶ್ರೀ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಶ್ರೀ ರಾಕೇಶ್ ಸಿದ್ಧರಾಮಯ್ಯ ಐಟಿಐ ಕಾಲೇಜು, ಅಲ್ಲಿಂದ ಜವಳ ಗಲ್ಲಿಯ ಇಂದಿರಾವನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ನಂತರ ಮುಖ್ಯಮಂತ್ರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮವಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.


Spread the love

LEAVE A REPLY

Please enter your comment!
Please enter your name here