ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಎಂದು ಆರೋಪಿಸಿರುವ ನಟ ದರ್ಶನ್, ಹಾಸಿಗೆ ಮತ್ತು ದಿಂಬಿಗಾಗಿ ನ್ಯಾಯಾಲಯದಲ್ಲಿ ಹೋರಾಟ ಮುಂದುವರಿಸಿದ್ದಾರೆ.
ಈ ಸಂಬಂಧ ಆದೇಶವನ್ನ 57ನೇ ಸೆಷನ್ಸ್ ನ್ಯಾಯಾಲಯ ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದೆ. ಇಂದು ಅರ್ಜಿಯ ವಿಚಾರಣೆ ಆರಂಭವಾಗುತ್ತಿದ್ದಂತೆ ಖುದ್ದು ಹಾಜರಾದ ಜೈಲು ಅಧೀಕ್ಷಕ ಸುರೇಶ್ ಅವರು ದರ್ಶನ್‌ಗೆ ನೀಡಿರುವ ಸೌಲಭ್ಯಗಳ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದರು.
ವಿಚಾರಣೆ ಸಂದರ್ಭದಲ್ಲಿ ಜೈಲ್ ಸೂಪರಿಂಟೆಂಡೆಂಟ್ ಸುರೇಶ್ ಕೂಡ ಹಾಜರಾಗಿದ್ದರು. ಈ ವೇಳೆ ಎಸ್ಪಿಪಿ ಪ್ರಸನ್ನಕುಮಾರ್ ಹಾಗೂ ದರ್ಶನ್ ಪರ ವಕೀಲ ಸುನೀಲ್ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅ.9ಕ್ಕೆಆದೇಶವನ್ನು ಕಾಯ್ದಿರಿಸಿದೆ.
ಈ ಮೊದಲು ದರ್ಶನ್ ಪರ ವಕೀಲರು, ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನಾದರೂ ನೀಡಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದರು. ಅದರಂತೆ ನ್ಯಾಯಾಲಯವೂ ಕೂಡ ಕನಿಷ್ಠ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಿತ್ತು. ಆದರೆ ಜೈಲಧಿಕಾರಿಗಳು ಕೋರ್ಟ್ ಆದೇಶವನ್ನು ಪಾಲಿಸದೇ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅರ್ಜಿ ಸಲ್ಲಿಸಿದ್ದರು. ಎರಡೂ ಕಡೆಯ ವಾದ ಹಾಗೂ ಪ್ರತಿವಾದಗಳನ್ನ ಆಲಿಸಿದ ನ್ಯಾಯಾಲಯ ಅಕ್ಟೋಬರ್ 9ಕ್ಕೆ ತೀರ್ಪು ಕಾಯ್ದಿರಿಸಿದೆ.



