ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸುಧಾರಿಸುತ್ತಿದೆ. ಶ್ರಮಜೀವಿಯಾದ ಅವರು ವಿಶ್ರಾಂತಿ ಪಡೆಯಲು ಮನವಿ ಮಾಡಿದ್ದೇವೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಿದ ಬಳಿಕ ವೇಣುಗೋಪಾಲ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.”ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆ ಪಡೆದಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಲು ಭೇಟಿಯಾಗಿದ್ದೇವು. ಈಗ ಅವರ ಆರೋಗ್ಯ ಸುಧಾರಿಸುತ್ತಿದೆ. ನಮ್ಮ ಅಧ್ಯಕ್ಷರು ಶ್ರಮಜೀವಿ. ದಿನದ 24 ತಾಸು ಕೂಡ ಪಕ್ಷಕ್ಕಾಗಿ ದುಡಿಯುತ್ತಾರೆ. ಎಲ್ಲೇ ಅವರ ಉಪಸ್ಥಿತಿ ಬಯಸಿದರೂ ಅವರು ಪಕ್ಷದ ಕಾರ್ಯಕ್ರಮಗಳಿಗೆ ತೆರಳುತ್ತಿದ್ದರು. ಅದು ಈಶಾನ್ಯ ರಾಜ್ಯಗಳಾಗಲಿ, ಯಾವುದೇ ಮೂಲೆ ಇದ್ದರೂ ಅವರು ತೆರಳುತ್ತಿದ್ದರು” ಎಂದರು.
“ಅವರು ಮತ್ತೆ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳಲು ಉತ್ಸುಕರಾಗಿದ್ದು, ಆರೋಗ್ಯ ಗಮನಿಸಿಕೊಂಡು ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ನಾವು ಮನವಿ ಮಾಡಿದ್ದೇವೆ. ಸೋನಿಯಾ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರತಿನಿತ್ಯ ಖರ್ಗೆ ಅವರ ಸಂಪರ್ಕದಲ್ಲಿ ಇದ್ದಾರೆ. ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ” ಎಂದು ತಿಳಿಸಿದರು.