ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಗದಗದ ಜಿಲ್ಲಾಡಳಿತ ಭವನದಲ್ಲಿ ಜರುಗಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ನರೇಗಲ್ಲ ಸರಕಾರಿ ನಿವೃತ್ತ ನೌಕರರ ಸಂಘದ ಸದಸ್ಯ ಎಸ್.ಕೆ. ಪಾಟೀಲರನ್ನು ಸನ್ಮಾನಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ 81 ವರ್ಷದ ಎಸ್.ಕೆ. ಪಾಟೀಲರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸನ್ಮಾನಿಸಿ, ಗೌರವಿಸಿದರು. ಹಿರಿಯ ನಾಗರಿಕರು ನಮ್ಮ ದೇಶದ ಆಸ್ತಿ. ಅವರು ನಮ್ಮ ಆಶಯಗಳು ಮತ್ತು ಹಕ್ಕುಗಳನ್ನು ಸ್ಥಳೀಯ ಮತ್ತು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬಲ್ಲಷ್ಟು ಸಶಕ್ತರು. ಅವರನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಸಚಿವರು ನುಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಗ್ಯಾರಂಟಿ ಯೋಜನೆ ಅನುಷ್ಠಾನದ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಎಸ್ಪಿ ರೋಹನ್ ಜಗದೀಶ, ಹಿರಿಯ ದಿವಾಣಿ ನ್ಯಾಯಾಧೀಶ ಸಿ.ಎಸ್. ಶಿವನಗೌಡ, ನರೇಗಲ್ಲ ಘಟಕದ ಅಧ್ಯಕ್ಷ ಡಿ.ಎ. ಅರವಟಗಿಮಠ, ನಿಕಟಪೂರ್ವ ಅಧ್ಯಕ್ಷ ಡಾ. ಆರ್.ಕೆ. ಗಚ್ಚಿನಮಠ ಮುಂತಾದವರು ಉಪಸ್ಥಿತರಿದ್ದರು.



