ಕಿತ್ತೂರು ಚನ್ನಮ್ಮ ಎಲ್ಲ ಸಮುದಾಯದವರಿಗೂ ಮಾದರಿ: ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ತಿಳಿಸಿದರು.

Advertisement

ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತದಿಂದ ಅಕ್ಟೋಬರ್ 23ರಂದು ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ವೀರರಾಣಿ ಕಿತ್ತೂರು ಚನ್ನಮ್ಮನವರ ಗೌರವಾರ್ಥವಾಗಿ ಪ್ರತಿ ವರ್ಷ ಅಕ್ಟೋಬರ್ 23, 24 ಹಾಗೂ 25ರಂದು ಕಿತ್ತೂರಿನ ಕೋಟೆ ಆವರಣದಲ್ಲಿ ಕಿತ್ತೂರು ಉತ್ಸವವನ್ನು ಆಚರಿಸಲಾಗುತ್ತಿದೆ. ಉತ್ಸವದ ಪೂರ್ವಭಾವಿಯಾಗಿ ಈಗಾಗಲೇ ವಿಜಯಜ್ಯೋತಿ ಯಾತ್ರೆಯು ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಗದಗ ಜಿಲ್ಲೆಗೆ ಅಕ್ಟೋಬರ್ 14ರಂದು ಆಗಮಿಸಿದ್ದು ನಮಗೆಲ್ಲ ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಪ್ರಶಂಸಿಸಿದರು.

ಜಿಲ್ಲೆಯ ಎಲ್ಲ ತಾಲೂಕು, ಗ್ರಾ.ಪಂಗಳು, ಶಾಲಾ-ಕಾಲೇಜುಗಳಲ್ಲಿಯೂ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಆಚರಿಸಲು ಕ್ರಮ ವಹಿಸಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ವೀರರಾಣಿ ಕಿತ್ತೂರು ಚನ್ನಮ್ಮ ದೇಶದ ಎಲ್ಲ ಸಮುದಾಯದವರಿಗೂ ಮಾದರಿಯಾಗಿದ್ದಾರೆ. ಜಯಂತಿ ಕಾರ್ಯಕ್ರಮದ ಆಚರಣೆಯಲ್ಲಿ ಹಬ್ಬದ ವಾತಾವರಣವಿರಬೇಕು ಹಾಗೂ ಯಾವುದೇ ಲೋಪ-ದೋಷಗಳಾಗದಂತೆ ಕ್ರಮ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜಯಂತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ದೇಶಭಕ್ತರು ಪಾಲ್ಗೊಳ್ಳುವಂತಾಗಬೇಕು ಎಂದು ಡಾ. ದುರಗೇಶ್ ಕೆ.ಆರ್ ತಿಳಿಸಿದರು.

ವಿಶೇಷ ಉಪನ್ಯಾಸ, ವೇದಿಕೆ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ, ಬ್ಯಾನರ್ ಅಳವಡಿಕೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಪಂಚಮಸಾಲಿ ಸಮಾಜದ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಮುಖಂಡರು, ಮಹಿಳಾ ಪ್ರತಿನಿಧಿಗಳು, ಹಿರಿಯರು, ಗಣ್ಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಮಾತನಾಡಿ, ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಲಾಗುವುದು. ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಜಯಂತಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದರು.


Spread the love

LEAVE A REPLY

Please enter your comment!
Please enter your name here