ಬೆಂಗಳೂರು: ಮೋಂಥಾ ಚಂಡಮಾರುತವು ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿಯತ್ತ ಚಲಿಸುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅಕ್ಟೋಬರ್ 27ರಿಂದ 29ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ 2ರೊಳಗೆ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ.
ಮೋಂಥಾ ಚಂಡಮಾರುತವು ಪ್ರಸ್ತುತ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ, ಚೆನ್ನೈನಿಂದ ಸುಮಾರು 520 ಕಿಮೀ ಹಾಗೂ ಆಂಧ್ರಪ್ರದೇಶದ ಕಾಕಿನಾಡದಿಂದ 570 ಕಿಮೀ ದೂರದಲ್ಲಿದೆ. ಚಂಡಮಾರುತವು ವಾಯವ್ಯ ದಿಕ್ಕಿನಲ್ಲಿ ಚಲಿಸುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಪ್ರಕಾರ, ಅಕ್ಟೋಬರ್ 28ರ ಸಂಜೆ ಅಥವಾ ರಾತ್ರಿ ಕಾಕಿನಾಡ ಕರಾವಳಿ (ಮಚಲಿಪಟ್ಟಣ ಮತ್ತು ಕಳಿಂಗಪಟ್ಟಣಂ ನಡುವೆ) ದಾಟುವ ನಿರೀಕ್ಷೆಯಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 90 ರಿಂದ 100 ಕಿಮೀ, ಕೆಲವೊಮ್ಮೆ 110 ಕಿಮೀ ತಲುಪುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.



