ಬೆಂಗಳೂರು: ಬೆಳಗಾವಿ ಜಿಲ್ಲೆಯ ಖಾನಾಪುರ ಸಮೀಪದ ಸುಳೇಗಾಳಿ ಗ್ರಾಮದಲ್ಲಿ ಎರಡು ಕಾಡಾನೆಗಳು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾದ ಘಟನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ನೋವು ವ್ಯಕ್ತಪಡಿಸಿದ್ದು, ಸೂಕ್ತ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದ್ದು,
ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ. ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಪ್ರಕರಣ ದಾಖಲಿಸಲು ಈಶ್ವರ ಖಂಡ್ರೆ ನಿರ್ದೇಶನ ನೀಡಿದ್ದಾರೆ.



