ಬೆಂಗಳೂರು: ಸರ್ಕಾರದಿಂದ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಕಚೇರಿ ತಿರುಗಾಡಿದ್ದ ರೈತ ನಿರಾಶೆಯಲ್ಲಿ ಡಿಸಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆಗೆಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಭೇಟಿ ನೀಡಿದ್ದು,
ಮೃತ ರೈತನ ವಶ ವಿಕ್ಷಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇನ್ನೂ ಈ ವೇಳೆ ಮಾತನಾಡಿದ ಸಚಿವರು, ರೈತರ ಸಂಕಷ್ಟವನ್ನು ನೀಗಿಸಲೆಂದೇ ಸರ್ಕಾರ ಅನೇಕ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಹೊರತಾಗಿಯೂ ಇಂತಹ ದುಡುಕಿನ ನಿರ್ಧಾರ ತೆಗೆದುಕೊಳ್ಳುತ್ತಿರುವುದು ವಿಷಾದನೀಯವಾಗಿದ್ದು,
ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರಧನ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹೆಚ್ಚುವರಿ ಪರಿಹಾರ ಕಲ್ಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಬಳಿ ಚರ್ಚಿಸಿ, ಕ್ರಮ ವಹಿಸಲಾಗುವುದು ಎಂದರು. ಇನ್ನೂ ಮೃತರ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸರ್ವೆ ನಡೆಸಿ, ಆ ಜಾಗವನ್ನು ಕುಟುಂಬಸ್ಥರಿಗೆ ನೀಡುವ ಸಾಧ್ಯತೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.



