ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಪ್ರಬಲ ಕಾರು ಸ್ಫೋಟವು ನಗರವನ್ನು ಬೆಚ್ಚಿ ಬೀಳಿಸಿದೆ. ಈ ದುರಂತದಲ್ಲಿ ಕನಿಷ್ಠ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇನ್ನೂ ಈ ವಿಚಾರವಾಗಿ ಪ್ರಧಾನಿ ಮೋದಿ ಪ್ರತಿಕ್ರಿಯೇ ನೀಡಿದ್ದಾರೆ. ಭೂತಾನ್ನಲ್ಲಿ ಮಾತನಾಡಿದ ಅವರು, ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ. ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ಎಲ್ಲರನ್ನೂ ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ.
ತನ್ನವರನ್ನು ಕಳೆದುಕೊಂಡ ಕುಟುಂಬದವರ ನೋವು ನನಗೆ ಅರ್ಥವಾಗುತ್ತದೆ. ಇಡೀ ರಾಷ್ಟ್ರ ಇಂದು ಅವರೊಂದಿಗೆ ನಿಂತಿದೆ ಎಂದರು. ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಈ ಪಿತೂರಿ ಹಿಂದೆ ಯಾರಿದ್ದರೋ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.


