ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವ: ಭಾರತ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ಮೇರಾ ಯುವ ಭಾರತ ಗದಗ ಘಟಕ ಹಾಗೂ ಶ್ರೀಮತಿ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ. ಅಗಡಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ ಲಕ್ಷ್ಮೇಶ್ವರದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಮತ್ತು ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ಲಕ್ಷ್ಮೇಶ್ವರ ಪಟ್ಟಣದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಪರಶುರಾಮ ಬಾರ್ಕಿ, ಯುವಕರಲ್ಲಿ ಕ್ರೀಡಾ ಚಟುವಟಿಕೆಗಳು ಕೇವಲ ಶಾರೀರಿಕ ಆರೋಗ್ಯವನ್ನಷ್ಟೇ ಅಲ್ಲದೆ ಮಾನಸಿಕ ಸಮತೋಲನ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ವದ ಸಾಧನವಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಎಸ್. ಎಫ್. ಕೊಡ್ಲಿ ಮಾತನಾಡಿ, ಕ್ರೀಡೆಯಲ್ಲಿ ಗೆಲುವು-ಸೋಲು ಅಷ್ಟೇ ಮುಖ್ಯವಲ್ಲ, ಸ್ಪರ್ಧೆಯ ಆತ್ಮಭಾವವೇ ನಿಜವಾದ ಜಯ ಎಂದು ಪ್ರೋತ್ಸಾಹಿಸಿದರು.
ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಪ್ರೊ. ಸೋಮಶೇಖರ ಕೆರಿಮಣಿ, ಮೇರಾ ಯುವ ಭಾರತ ಗದಗ ಘಟಕದ ಪ್ರತಿನಿಧಿಗಳಾದ ರವಿ ಹೊಂಬಾಳಿ ಮತ್ತು ಹನುಮಂತ ಹಳ್ಳೂರ ಮಾತನಾಡಿದರು.
ಕ್ರೀಡಾಕೂಟದ ಸ್ಪರ್ಧೆಗಳಲ್ಲಿ ವಿಜೇತರಾದ ಮತ್ತು ಪಾಲ್ಗೊಂಡ ಎಲ್ಲ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಮತ್ತು ಟ್ರೋಫಿಗಳನ್ನು ವಿತರಿಸಲಾಯಿತು.


