ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಇಂದು ಬೆಳಗಿನ ಜಾವ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 31ಕ್ಕೆ ಏರಿಕೆಗೊಂಡಿದೆ.
ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಈ ಮೃಗಾಲಯದಲ್ಲಿ ಕಳೆದ ಐದು ದಿನಗಳಲ್ಲಿ 31 ಕೃಷ್ಣ ಮೃಗಗಳು ಮೃತಪಟ್ಟಿದ್ದು, ಅರಣ್ಯ ಇಲಾಖೆ ಸೇರಿದಂತೆ ಸ್ಥಳೀಯ ಅಧಿಕಾರಿಗಳನ್ನು ಆತಂಕಕ್ಕೆ ತಳ್ಳಿದೆ.
ನ.13ರಂದು 8, ನ.15ರಂದು 20, ನಿನ್ನೆ 16ರಂದು ಬೆಳಗ್ಗೆ 1 ಮತ್ತು ಸಂಜೆ ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿತ್ತು. ಇಂದು ಬೆಳಗ್ಗೆ ಇನ್ನೊಂದು ಸಾವನ್ನಪ್ಪಿರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಉಳಿದಿರುವ ಏಳು ಕೃಷ್ಣಮೃಗಗಳನ್ನು ಉಳಿಸಿಕೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಬನ್ನೇರುಘಟ್ಟ ಮೃಗಾಲಯದಿಂದ ಆಗಮಿಸಿರುವ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ.
ಕೃಷ್ಣ ಮೃಗಗಳ ಸರಣಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮೃಗಾಲಯಕ್ಕೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಭೇಟಿ ನೀಡಿದ್ದು, ಇಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.



