ವಿಜಯಸಾಕ್ಷಿ ಸುದ್ದಿ, ಗದಗ: ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿ, ಮ್ಯಾನುವಲ್ ಸ್ಕ್ಯಾವೆಂಜರ್ ನಿಯೋಜನೆ ನಿಷೇಧ ಮತ್ತು ಅವರ ಪುನರ್ವಸತಿ ಸೌಲಭ್ಯಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಫಾಯಿ ಕರ್ಮಚಾರಿಗಳಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಕುರಿತು ಕ್ರಮ ಜರುಗಿಸಬೇಕು. ನೇರವಾಗಿ ಪಾವತಿಸಲಾಗುತ್ತಿರುವ ಪೌರಕಾರ್ಮಿಕರ ವೇತನದಲ್ಲಿ ಭವಿಷ್ಯ ನಿಧಿ ಹಾಗೂ ಇಎಸ್‌ಐ ಕಡಿತಗಳ ಕುರಿತು ಪರಿಶೀಲಿಸಬೇಕು. ಪೌರಕಾರ್ಮಿಕರು ಹಾಗೂ ಅವಲಂಬಿತರಿಗೆ ದೊರಕಬೇಕಾದ ಸೌಲಭ್ಯಗಳು ಹಾಗೂ ಕುಂದುಕೊರತೆ ಕುರಿತು ತಾಲೂಕು ಮಟ್ಟದಲ್ಲಿಯೂ ಸಭೆ ಜರುಗಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ನಿರ್ದೇಶನ ನೀಡಿದರು.
ಸಭೆಯಲ್ಲಿ ಪೌರಕಾರ್ಮಿಕರಿಗೆ ಪರಿಕರಗಳ ಬಳಕೆಗಳ ಕುರಿತು ಕಾರ್ಯಾಗಾರ, ಪೌರಕಾರ್ಮಿಕರ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ, ನಗರಸಭೆಯ ವ್ಯಾಪ್ತಿಯಲ್ಲಿನ ಶೌಚಾಲಯಗಳ ದುರಸ್ತಿ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಜಿಲ್ಲಾ ಸಂಯೋಜಕರಾದ ರಮೇಶ ಕೊಳೂರ, ಸಮಿತಿ ಸದಸ್ಯರಾದ ಯುವರಾಜ ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.


