ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಲು ಆಗ್ರಹ: ಮೈಮೇಲೆ ಡೀಸಲ್ ಸುರಿದುಕೊಂಡು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

0
Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಕಾಂಗ್ರೆಸ್ ಹೈಕಮಾಂಡ್ ರೋಣ ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡದೇ ಹೋದರೆ ಸಾಮೂಹಿಕವಾಗಿ ನೀಡಿರುವ ರಾಜೀನಾಮೆ ಪತ್ರಗಳನ್ನು ಅಂಗೀಕರಿಸಬೇಕು ಎಂದು ರೋಣ ಹಾಗೂ ನರೇಗಲ್ ಬ್ಲಾಕ್ ಕಾಂಗ್ರೆಸ್ ಘಟಕಗಳ ಮುಂಚೂಣಿ ಪದಾಧಿಕಾರಿಗಳು ಸ್ಥಳೀಯ ಕೆಕೆ ವೃತ್ತದಲ್ಲಿ ಶನಿವಾರ ಹಕ್ಕೊತ್ತಾಯ ಮಂಡಿಸಿದರು.

Advertisement

ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮತಕ್ಷೇತ್ರದಲ್ಲಿ ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಸರ್ಕಾರದ ಆಶಯಗಳನ್ನು ಈಡೇರಿಸಿದ ಹಾಗೂ ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಹಗಲಿರುಳು ಶ್ರಮಿಸಿದ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದು ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಅಭಿಮಾನಿಗಳ ಒತ್ತಾಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ರೋಣ ಮತಕ್ಷೇತ್ರದದಿಂದ ಶಾಸಕ ಜಿ.ಎಸ್. ಪಾಟೀಲರನ್ನು 5 ಬಾರಿ ಪ್ರಚಂಡ ಬಹುಮತದಿಂದ ವಿಧಾನಸಭೆಗೆ ಕಳುಹಿಸಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನ ನೀಡುವಾಗ ರೋಣ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರನ್ನು ಕಡೆಗಣಿಸಿದೆ. ರೋಣ ಮತಕ್ಷೇತ್ರದ ಮತದಾರರ ಬೇಡಿಕೆಯನ್ನು ನಿರ್ಲಕ್ಷಿಸುವ ಯತ್ನ ಇದಾಗಿದೆ ಎಂದು ಕಾಂಗ್ರೆಸ್ ಘಟಕದ ಮಹಿಳಾ ಪದಾಧಿಕಾರಿಗಳು ಆರೋಪಿಸಿದರು.

ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾಗಿರುವ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ ಪ್ರಸ್ತುತ ಘಟನೆಗಳನ್ನು ಗಮನಿಸಿದರೆ ಅಂತಹ ಆಶಾದಾಯಕ ಬೆಳವಣಿಗೆ ಕಾಣದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಹಕ್ಕೊತ್ತಾಯ ಮಾಡುತ್ತಿದ್ದೇವೆ. ಹೀಗಾಗಿ ಈ ಬಾರಿ ಸಚಿವ ಸಂಪುಟದಲ್ಲಿ ಶಾಸಕ ಜಿ.ಎಸ್. ಪಾಟೀಲರಿಗೆ ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ರೋಣ, ನರೇಗಲ್ ಬ್ಲಾಕ್ ಕಾಂಗ್ರೆಸ್ ಮುಂಚೂಣಿ ಘಟಕದ ಪದಾಧಿಕಾರಿಗಳು ನೀಡಿರುವ ಸಾಮೂಹಿಕ ರಾಜೀನಾಮೆ ಪತ್ರಗಳನ್ನು ಅಂಗೀಕರಿಸಬೇಕು. ಮುಂದಿನ ದಿನಗಳಲ್ಲಿ ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ನಡೆಸುತ್ತಿರುವ ಹೋರಾಟವನ್ನು ರಾಷ್ಟç ರಾಜಧಾನಿ ದೆಹಲಿವರೆಗೆ ಹಬ್ಬಿಸುತ್ತೇವೆ ಎಂದು ಎಚ್ಚರಿಸಿದರು.

ಈ ವೇಳೆ ರೋಣ, ನರೇಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ನೈತಿಕ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ನಡೆಯುತ್ತಿದ್ದ ಹಕ್ಕೊತ್ತಾಯದ ವೇಳೆ ತಾಲೂಕಿನ ಮಾರನಬಸರಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರವಿ ಗಡಾದ ಹಾಗೂ ದಿಂಡೂರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಸಂಗಪ್ಪ ತೇಜಿ ಮೈಮೇಲೆ ಡೀಸಲ್ ಸುರಿದುಕೊಂಡಾಗ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಕೆಲ ಕಾಂಗ್ರೆಸ್ ಕಾರ್ಯಕರ್ತರು ತಡೆದರು. ಕೆಲ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.


Spread the love

LEAVE A REPLY

Please enter your comment!
Please enter your name here