ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಬುಧವಾರ ಶಿರಹಟ್ಟಿಯ ತಹಸೀಲ್ದಾರ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಸಂವಿಧಾನ ದಿವಸ ಆಚರಣೆ ಮಾಡಲಾಯಿತು.
ಇದಕ್ಕೂ ಮೊದಲು ಶ್ರೀ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಜಾಥಾ ಸಂಗೊಳ್ಳಿ ರಾಯಣ್ಣ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಹಾಗೂ ನೆಹರೂ ವೃತ್ತ ಮಾರ್ಗವಾಗಿ ತಾಲೂಕು ಕಚೇರಿ ಆವರಣಕ್ಕೆ ಬಂದು ತಲುಪಿತು. ಜಾಥಾದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಎನ್.ಎಸ್.ಎಸ್ ಮಕ್ಕಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು. ಕೆ.ಎಚ್. ಹೊಂಬಾಳಿಮಠ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎ. ಬಳಿಗೇರ, ಡಿ.ಕೆ. ಹೊನ್ನಪ್ಪನವರ, 1949ರ ನವೆಂಬರ್ 26ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಆಚರಣೆ ಮಾಡುತ್ತಿದ್ದೇವೆ. ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿ, ಸರ್ವರಿಗೂ ಸಮಾನತೆ ಒದಗಿಸುವುದರ ಜೊತೆಗೆ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ ಎಂದರು.
ಶಾಸಕ ಡಾ. ಚಂದ್ರು ಲಮಾಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾ.ಪಂ ಇಓ ರಾಮಣ್ಣ ದೊಡ್ಡಮನಿ, ಸಮಾಜ ಕಲ್ಯಾಣ ಇಲಾಖೆಯ ಸಹ ನಿರ್ದೇಶಕ ಗೋಪಾಲ ಲಮಾಣಿ, ಬಿಇಓ ಎಚ್.ಎನ್. ನಾಯ್ಕ, ಪಿಎಸ್‌ಐ ಎಸ್.ಟಿ. ಕಡಬಿನ, ಶಿರಸ್ತೇದಾರ ಗಿರಿಜಾ ಪೂಜಾರ, ನಾಗರಾಜ ಲಕ್ಕುಂಡಿ, ಸಂದೀಪ ಕಪ್ಪತ್ತನವರ, ಡಿ.ಕೆ. ಹೊನ್ನಪ್ಪನವರ, ಫಕೀರೇಶ ರಟ್ಟಿಹಳ್ಳಿ, ಜಾನು ಲಮಾಣಿ, ನಂದಕ್ಕ ಪಲ್ಲೇದ, ರಾಮಣ್ಣ ಕಂಬಳಿ, ಅಕ್ಬರ್ ಯಾದಗಿರಿ, ಸಂತೋಷ್ ತೊಡೇಕರ್, ವಿನಾಯಕ ಪರಬತ ಮುಂತಾದವರು ಉಪಸ್ಥಿತರಿದ್ದರು.



