ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಹೃದಯ್ (11) ದಾಳಿಗೆ ಗುರಿಯಾದ ಬಾಲಕನಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಬಾಲಕನನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. .
ಘಟನೆ ಲಿಂಗದಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಕೇವಲ ವಾರದ ಹಿಂದಷ್ಟೇ ಅದೇ ಪ್ರದೇಶದಲ್ಲಿ 5 ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿಯಾಗಿದ್ದ ಘಟನೆ ನಡೆದಿದೆ.
ಆ ದುರ್ಘಟನೆ ಮಾಸುವ ಮುನ್ನವೇ ಮತ್ತೊಂದು ದಾಳಿ ಪ್ರಕರಣ ಬೆಳಕಿಗೆ ಬಂದಿರುವುದು ಆತಂಕವನ್ನು ಹೆಚ್ಚಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದು, ಚಿರತೆ ಪತ್ತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.



