ಬೆಂಗಳೂರು: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆಯೊಡ್ಡಿದ ಆರೋಪ ಎದುರಿಸುತ್ತಿರುವ ಸೂರಜ್ ರೇವಣ್ಣಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.
ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಎಸ್ಐಟಿ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ತಿರಸ್ಕರಿಸಿದೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಲ್ಲಿಸಿದ ವರದಿ ತೃಪ್ತಿಕರವಾಗಿಲ್ಲ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ತನಿಖೆ ಮುಂದುವರಿಸಿ ಡಿಸೆಂಬರ್ 29ರೊಳಗೆ ಹೊಸ ತನಿಖಾ ವರದಿ ಸಲ್ಲಿಸಲು ಎಸ್ಐಟಿ ಪೊಲೀಸರಿಗೆ ಸೂಚಿಸಿದೆ.
ಇನ್ನೂ ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಇತ್ತೀಚೆಗೆ ಡಾ. ಸೂರಜ್ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಅವರು ಒಂದು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಗೊಂಡಿದ್ದರು. ಇದೇ ಪ್ರಕರಣಗಳ ಹಿನ್ನಲೆಯಲ್ಲಿ ಈಗಾಗಲೇ ಎಚ್.ಡಿ. ರೇವಣ್ಣ–ಭವಾನಿ ರೇವಣ್ಣ ದಂಪತಿಯ ಪುತ್ರರಾದ ಸೂರಜ್ ಹಾಗೂ ಮತ್ತೊಬ್ಬ ಪುತ್ರ ಪ್ರಜ್ವಲ್ ರೇವಣ್ಣ ಇಬ್ಬರೂ ಕಾನೂನು ಸವಾಲುಗಳನ್ನು ಎದುರಿಸುತ್ತಿದ್ದು, ಪ್ರಜ್ವಲ್ ಪ್ರಸ್ತುತ ಜೀವಾವಧಿ ಶಿಕ್ಷೆಯೊಂದಿಗೆ ಪರಪ್ಪನ ಅಗ್ರಹಾರದಲ್ಲೇ ಉಳಿದಿದ್ದಾರೆ.


