ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಬಸ್ ನಿಲ್ದಾಣ, ಅಂಗನವಾಡಿ ಕೇಂದ್ರ, ಹೋಟೆಲ್, ಹಾಸ್ಟೆಲ್ಗಳ ವ್ಯಾಪ್ತಿಯಲ್ಲಿ ಸಂಬಂಧಿತ ಅಧಿಕಾರಿಗಳು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಅವರ ಮೂಲಕ ಬೀದಿ ನಾಯಿಗಳ ಸಂಖ್ಯೆಯ ವಿವರವನ್ನು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದರು.
ಬೀದಿ ನಾಯಿಗಳ ಸಂತಾನ ಹರಣ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲು ಸೂಕ್ತ ಜಾಗಗಳನ್ನು ಗುರುತಿಸಿ ಕ್ರಮ ಜರುಗಿಸಬೇಕು. ಪ್ರತಿ ಹೋಬಳಿ ಮಟ್ಟಗಳಲ್ಲಿ ಬೀದಿ ನಾಯಿಗಳ ಪಾಲನಾ ಕೇಂದ್ರಗಳನ್ನು ಸ್ಥಾಪಿಸಬೇಕು. ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಈವರೆಗೆ ಕೈಗೊಂಡ ಕ್ರಮಗಳ ಕುರಿತು ಆಯಾ ಸಂಸ್ಥೆಗಳ ಮುಖ್ಯಸ್ಥರು ಮುಚ್ಚಳಿಕೆ ಪತ್ರ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಬೀದಿ ನಾಯಿಗಳನ್ನು ಸುರಕ್ಷಿತವಾಗಿ ವಶಪಡಿಸಿಕೊಳ್ಳಲು ವಿಶೇಷ ತಂಡ ರಚನೆ, ಅವುಗಳಿಗೆ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ, ಆರೋಗ್ಯ ತಪಾಸಣೆ ನಡೆಸಿ, ಗುರುತು ಹಾಕಿ ಹಿಂದಿರುಗಿ ಬಿಡುವ ಕುರಿತು ಚರ್ಚಿಸಲಾಯಿತು.
ಜಿಲ್ಲೆಯಾದ್ಯಂತ ಕಸದ ಸಮರ್ಪಕ ನಿರ್ವಹಣೆಗಾಗಿ ಮಾರುಕಟ್ಟೆ, ಹೋಟೆಲ್, ಮಾಂಸದ ಅಂಗಡಿಗಳು, ಸಾರ್ವಜನಿಕ ಸ್ಥಳಗಳ ತ್ಯಾಜ್ಯವನ್ನು ಮುಚ್ಚಿದ ಡಬ್ಬಿಗಳಲ್ಲಿ ಸಂಗ್ರಹಿಸುವ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಲು ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿ.ವೈ.ಎಸ್.ಪಿ ಮಹಾಂತೇಶ ಸಜ್ಜನ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ನಗರ ಹಾಗೂ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
ಬೀದಿ ನಾಯಿಗಳಿಂದ ಮಕ್ಕಳಿಗೆ, ಮಹಿಳೆಯರಿಗೆ, ಹಿರಿಯ ನಾಗರಿಕರಿಗೂ ಅಪಾಯ ಉಂಟಾಗಿರುವ ಘಟನೆಗಳು ಕೆಲವೆಡೆ ವರದಿಯಾಗಿರುವ ಹಿನ್ನೆಲೆಯಲ್ಲಿ, ಸಮಸ್ಯೆ ಗಂಭೀರವಾಗುವ ಮುನ್ನ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಸಿ.ಎನ್. ಶ್ರೀಧರ್ ಸೂಚಿಸಿದರು.



