ಹಾವೇರಿ:- ಜಿಲ್ಲೆಯ ಸವಣೂರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಸವಣೂರು ಸಿಪಿಐ ದೇವಾನಂದ ಹಾಗೂ ಹೆಡ್ ಕಾನ್‌ಸ್ಟೆಬಲ್ ಮಲ್ಲಿಕಾರ್ಜುನರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 10ರಂದು ಶಿಕ್ಷಕ ಜಗದೀಶ್ ಮೇಲೆ ಸ್ಥಳೀಯರು ಧರ್ಮದೇಟು ನೀಡಿ ಬೀದಿ ಬೀದಿಯಲ್ಲಿ ಮೆರವಣಿಗೆ ನಡೆಸಿದ್ದರು. ಈ ಘಟನೆಗೆ ಸಂಬಂಧಿಸಿ ಪೊಲೀಸರ ಪಾತ್ರದ ಬಗ್ಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು. ಕೊನೆಗೆ ಎಸ್ಪಿ ಕರ್ತವ್ಯ ಲೋಪದಡಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಿದ್ದಾರೆ.



