ಬೆಂಗಳೂರು:- ಉತ್ತರ ಕರ್ನಾಟಕದಲ್ಲಿ ಶೀತದಲೆಯ ಪ್ರಭಾವ ಹೆಚ್ಚಾಗುತ್ತಿದ್ದು, ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಕಲಬುರುಗಿ ಸೇರಿ ಹಕವೆಡೆ ಮೈಕೊರೆಯುವ ಚಳಿ ಹೆಚ್ಚುತ್ತಿದ್ದು, ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ವಿಜಯಪುರದಲ್ಲಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. ಹೀಗಾಗಿ ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಇಲಾಖೆ ಮತ್ತು ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.
ಶೀತ ಗಾಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದ್ದು, ವಿಜಯಪುರದಲ್ಲಿ 20 ವರ್ಷಗಳಲ್ಲಿ ಮೂರನೇ ಬಾರಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ 8 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿತ್ತು. ಇದೀಗ ವಿಜಯಪುರ ಜಿಲ್ಲೆಯ ಜನರು ಮೈಕೊರೆಯುವ ಚಳಿಯಿಂದ ತತ್ತರಿಸುತ್ತಿದ್ದು, ಕಳೆದ 20 ವರ್ಷಗಳಲ್ಲಿ ಮೂರನೇ ಬಾರಿ ಕನಿಷ್ಠ ತಾಪಮಾನ ದಾಖಲಾಗಿದೆ. 10 ವರ್ಷಗಳಲ್ಲಿ ಎರಡನೇ ಬಾರಿ ಅತಿ ಕಡಿಮೆ ಉಷ್ಣಾಂಶ ಕಂಡುಬಂದಿದೆ.
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್‌ಗೆ ತೆರಳದಂತೆ ಸಲಹೆ ನೀಡಿದ್ದಾರೆ.
ಎಲ್ಲೆಲ್ಲಿ ಒಣ ಹವೆ?
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.



