ಹುಬ್ಬಳ್ಳಿ:- ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಜರುಗಿದೆ.
ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಏಳು ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
19 ವರ್ಷದ ಮಾನ್ಯಾ ಹತ್ಯೆಯಾದ ಯುವತಿ. ಈಕೆ ಅದೇ ಗ್ರಾಮದ ವಿವೇಕಾನಂದ ಎಂಬವನನ್ನು ಪ್ರೀತಿಸಿ ಮದುವೆಯಾಗಿದ್ದಳು. ಯುವಕ ಅನ್ಯಜಾತಿಯವನು ಎಂಬ ಕಾರಣಕ್ಕೆ ಆಕೆಯ ತಂದೆ ಪ್ರಕಾಶಗೌಡ ಮನೆಗೆ ನುಗ್ಗಿ, ಗರ್ಭಿಣಿ ಎಂಬುದನ್ನೂ ನೋಡದೇ ಪೈಪ್ ಮತ್ತು ಗುದ್ದಲಿಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಘಟನೆಯಲ್ಲಿ ಮತ್ತಿಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಮಾನ್ಯಾಳ ಕೊಲೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪ್ರಕಾಶಗೌಡ ಪಾಟೀಲ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಧಾರವಾಡ ಎಸ್ಪಿ ಗುಂಜನ್ ಆರ್ಯ, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



