ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರೂ ಶಿಕ್ಷಣ ಹೊಂದುವುದು ಅವಶ್ಯಕ. ಈ ದಿಸೆಯಲ್ಲಿ ಪೋಷಕರು ಮಕ್ಕಳಿಗಾಗಿ ಆಸ್ತಿಯನ್ನು ಮಾಡದೇ, ಮಕ್ಕಳನ್ನೇ ಆಸ್ತಿಯನ್ನಾಗಿಸುವುದಕ್ಕೆ ಅವರಿಗೆ ಗುಣಮಟ್ಟದ ಶಿಕ್ಷಣ ಸಿಗುವ ಅವಕಾಶವನ್ನು ಕಲ್ಪಿಸಬೇಕೆಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಹೇಳಿದರು.
ಅವರು ಶಿರಹಟ್ಟಿಯ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳ ದೈನಂದಿನ ಪ್ರಗತಿಯ ಬಗ್ಗೆ ನಿಗಾ ವಹಿಸಬೇಕು. ಅವರಿಗೆ ಮನೆಯಲ್ಲಿ ಶಿಕ್ಷಣಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸಬೇಕು. ಅಂದಾಗ ಮಕ್ಕಳು ಗುಣಮಟ್ಟದ ಶಿಕ್ಷಣ ಹೊಂದಲು ಸಾಧ್ಯವಾಗುತ್ತದೆ. ಶಾಲೆಗಳಲ್ಲಿಯೂ ಸಹ ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸಲು ಮುಂದಾಗಬೇಕೆಂದು ಹೇಳಿದರು.
ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಫಾದರ್ ಅಭಿನವ ಪಾಲ್, ಹುಬ್ಬಳ್ಳಿಯ ರಾಜು ಮಳಗೇರಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಸಂದೀಪ ಕಪ್ಪತ್ತನವರ, ಹೊನ್ನಪ್ಪ ಶಿರಹಟ್ಟಿ, ಮಂಜುನಾಥ ಘಂಟಿ, ಅಜ್ಜು ಪಾಟೀಲ, ಮಾಬುಸಾಬ ಲಕ್ಷ್ಮೇಶ್ವರ, ಆನಂದ ಕೋಳಿ, ಮುತ್ತು ಮಜ್ಜಗಿ, ಅಕ್ಬರಸಾಬ ಯಾದಗಿರಿ, ಎಚ್.ಆರ್. ಬೆನಹಾಳ, ದೇವಪ್ಪ ಬಟ್ಟೂರ, ರಾಜಗೋಪಾಲ ಕಡ್ಲಿಕೊಪ್ಪ, ಸಂಸ್ಥೆಯ ಮುಖ್ಯಸ್ಥ ಎಸ್.ಎಸ್. ಸಾಮ್ರಾಟ್ ಮತ್ತು ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.



